ಮಡಿಕೇರಿ ಜ.29 NEWS DESK : ಕಟ್ಟೆಮಾಡು ಗ್ರಾಮದ ಶ್ರೀಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ಕೊಡಗು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರ್ಚಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಕೊಡಗು ಜಿಲ್ಲೆಯಲ್ಲಿ ಇನ್ನು ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅರ್ಚಕರ ಮನೆಯ ಬಳಿ ತೆರಳಿ ಅರ್ಚಕರು ಹಾಗೂ ಅವರ ತಾಯಿಯ ಮೇಲೆ ಹಲ್ಲೆ ಮಾಡಿರುವುದು ಅಮಾನವೀಯ ಕೃತ್ಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಕಿಡಿಗೇಡಿಗಳಿಗೆ ಕಾನೂನಿನ ಬಗ್ಗೆ ಭಯವಿಲ್ಲದಾಗಿದೆ. ಹಲ್ಲೆ, ದೌರ್ಜನ್ಯ, ಜನಾಂಗೀಯ ಸಂಘರ್ಷ, ದರೋಡೆ, ಗೋಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಜನಸಾಮಾನ್ಯರು ಭಯಮುಕ್ತರಾಗಿ ಜೀವನ ಸಾಗಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರವಿ ಕಾಳಪ್ಪ ಆರೋಪಿಸಿದ್ದಾರೆ.