ಮಡಿಕೇರಿ NEWS DESK ಜ.30 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ ಮಡಿಕೇರಿಯಲ್ಲಿ ನಡೆಯಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮೈದಾನದಲ್ಲಿರಿಸಿ ಗಾಂಧೀ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು. ಇದೇ ವೇಳೆ ಪೊಲೀಸ್ ಮೀಸಲು ಪಡೆ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟçಪಿತ ಮಹಾತ್ಮ ಗಾಂಧಿಗೆ ಗೌರವಾರ್ಪಣೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು. ನಂತರ ಸರ್ವಧರ್ಮ ಪ್ರಾರ್ಥನೆ ನಡೆಯಿತು, ಸರ್ವಧರ್ಮ ಗುರುಗಳು ಸಂದೇಶಗಳನ್ನು ಬೋಧಿಸಿದರು. ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿಸಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ನಿಕಟ ಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಹಾಜರಿದ್ದು, ಮಹಾತ್ಮ ಗಾಂಧಿಗೆ ಗೌರವ ಅರ್ಪಿಸಿದರು.