ಮಡಿಕೇರಿ ಜ.30 NEWS DESK : ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ.ಧನರಾಜು ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನಾ ಕಾರ್ಯಕ್ರಮ-2025 ರ ಅನುಷ್ಠಾನದ ಬಗ್ಗೆ ಮಂಗಳವಾರ ಭಿತ್ತಿ ಪತ್ರಗಳು, ಕರಪತ್ರಗಳು ಹಾಗೂ ಬ್ಯಾನರ್ಗಳನ್ನು ಬಿಡುಗಡೆಗೊಳಿಸಿದರು. ಕರಪತ್ರಗಳನ್ನು ಬಿಡುಗಡೆ ಮಾಡಿದ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಂ.ಕೆ.ಸತೀಶ್ ಕುಮಾರ್ ಮಾತನಾಡಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ಮಾತನಾಡಿ ಜ.30 ರಿಂದ ಫೆ.13 ರವರೆಗೆ ಜಿಲ್ಲಾದ್ಯಂತ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಯಲಿದೆ. ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಹಾಗೂ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು. ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ರೇಡಿಯೋ ಪ್ರಸಾರವನ್ನು ಕೂಡ ಮಾಡಲಾಗುವುದು. ಕೊಡಗು ಜಿಲ್ಲೆಯಲ್ಲಿ 1 ಪಿ.ಬಿ ಮತ್ತು 3 ಎಂ.ಬಿ ಒಟ್ಟು 4 ಪ್ರಕರಣಗಳಿದ್ದು, ಇವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸೆಲ್ಫ್ಕೇರ್ ಕಿಟ್ ಹಾಗೂ ಎಂಸಿಆರ್ ಫೂಟ್ವೇರ್ಗಳನ್ನು ಸಹ ನೀಡಿದ್ದೇವೆ ಎಂದು ಹೇಳಿದರು. ವ್ಯಾಪಕ ಪ್ರಚಾರ ಕೈಗೊಳ್ಳಲು ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಸಮುದಾಯ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ. ಸಭೆಯಲ್ಲಿ ಡಾ.ಸತೀಶ್ಕುಮಾರ್ ಎಂ.ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಡಾ.ಆನಂದ್.ಎನ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ, ಡಾ.ಮಧುಸೂಧನ್ ಎ.ಆರ್, ಜಿಲ್ಲಾ ಆರ್ಸಿಹೆಚ್ ಅಧಿಕಾರಿಗಳು, ಶಾಂತಿ ಎಚ್.ಕೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವಜನ ಮತ್ತು ಸಬಲೀಕರಣ ಇಲಾಖೆ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಾಗಿದ್ದರು. ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯ ಪಡುವ ಅಗತ್ಯವಿಲ್ಲ, ಈ ಜಾಗೃತಿ ಅಭಿಯಾನದ ಸಂದರ್ಭದಲ್ಲಿ ಶಾಲಾ ಮಕ್ಕಳ ತಪಾಸಣೆ, ಉಪ ಆರೋಗ್ಯ ಕೇಂದ್ರ ಮೂಲಕ ಗ್ರಾಮದಲ್ಲಿ ಜಾಗೃತಿ ಮೂಡಿಸುವುದಲ್ಲದೇ, ಕುಷ್ಠರೋಗ ನಿರ್ಮೂಲನೆಯ ಕುರಿತು ಎಲ್ಲರಿಗೂ ಪ್ರತಿಜ್ಞಾ ವಿಧಿ ಭೋದಿಸಲಾಗುವುದು ಎಂದರು. ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ವ್ಯಕ್ತಿಯ ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು, ತ್ವಚೆಯ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು, ವ್ಯಕ್ತಿಯ ದೇಹದ ಯಾವುದೇ ಭಾಗಗಳಲ್ಲಿ ತಿಳಿ ಬಿಳಿ ತಾಮ್ರದ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡುಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿಕೊಳ್ಳಬೇಕು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ಸೂಚಿಸಿದರು.