ಮಡಿಕೇರಿ NEWS DESK ಜ.30 : ನನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಕೆಲವರು ಕೊಡವರ ಬಗ್ಗೆ ವಿಶೇಷವಾಗಿ ನನ್ನ ಬಗ್ಗೆ ದ್ವೇಷವನ್ನು ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಮತ್ತು ಬೆದರಿಕೆಯ ಕಾಮೆಂಟ್ಗಳನ್ನು ರವಾನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಇದೇ ಜ.26 ರಂದು ಸಿಎನ್ಸಿ ಸ್ವಯಂಸೇವಕರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಅಂದು ಸರಕಾರಿ ರಜೆ ಇದ್ದರೂ ಅಲ್ಲಿ ವಾಹನದಲ್ಲಿ ಅಪರಿಚಿತ ವ್ಯಕ್ತಿಗಳು ಜಿಲ್ಲಾಡಳಿತ ಭವನದ ಸುತ್ತಲೂ ತಿರುಗಾಡುತ್ತಿರುವುದು ಕಂಡು ಬಂದಿದೆ ಎಂದು ನಾಚಪ್ಪ ಉಲ್ಲೇಖಿಸಿದ್ದಾರೆ. ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ಈ ದೃಶ್ಯಗಳನ್ನು ಪರಿಶೀಲಿಸಿ ತನಿಖೆ ನಡೆಸುವಂತೆ ಅವರು ಪೊಲೀಸರನ್ನು ವಿನಂತಿಸಿದ್ದಾರೆ. ಕಳೆದ 35 ವರ್ಷಗಳಿಂದ ಸಿಎನ್ಸಿ ಸಂಘಟನೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಪರಿಶಿಷ್ಟ ಪಂಗಡ ಸ್ಥಾನಮಾನ ಮತ್ತು ಆಂತರಿಕ ಸ್ವ-ನಿರ್ಣಯದ ಹಕ್ಕುಗಳನ್ನು ಒಳಗೊಂಡಂತೆ ಸ್ಥಳೀಯ ಕೊಡವರ ಹಕ್ಕುಗಳಿಗಾಗಿ ಶಾಂತಿಯುತ ಹೋರಾಟ ನಡೆಸುತ್ತಾ ಬಂದಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಜ.29 ರಂದು ನಾನು ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ದೂರು ಸಲ್ಲಿಸಿದ್ದೇನೆ. ದೂರಿನ ಪ್ರತಿಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರದ ಗೃಹ ಸಚಿವರಿಗೆ ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಕಳುಹಿಸಿರುವುದಾಗಿ ಮಾಹಿತಿ ನೀಡಿದ್ದಾರೆ.