ಸಿದ್ದಾಪುರ ಫೆ.1 NEWS DESK : ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಅತ್ಯವಶ್ಯಕವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನ ಶಾಲೆಗೆ ಕಳಿಸುವ ಮೂಲಕ ಉತ್ತಮ ಪ್ರಜೆಗಳಾಗಿ ಗುರುತಿಸಿಕೊಳ್ಳಲು ಸಹಕಾರ ನೀಡಬೇಕಾಗಿದೆ ಎಂದು ಚೆನ್ನಯ್ಯಕೋಟೆ ಗ್ರಾ.ಪಂ ಅಧ್ಯಕ್ಷ ಮೇಕೇರಿರ ಅರುಣ್ ಕುಮಾರ್ ಅಭಿಪ್ರಾಯಪಟ್ಟರು ಚೆನ್ನಯ್ಯನ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಯಾವುದೇ ಕೊರತೆ ಇಲ್ಲದೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಇದರ ಸದುಪಯೋಗಪಡಿಸಿಕೊಂಡು ಶಿಕ್ಷಣದೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬಂದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದ ಅವರು, ಗ್ರಾಮ ಪಂಚಾಯಿತಿ ಮೂಲಕ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಲಾಗುವುದು ಎಂದರು. ಮಾಜಿ ತಾಲ್ಲೂಕು ಅಧ್ಯಕ್ಷೆ ರಾಣಿ ನಾರಾಯಣ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿತ ಅದೆಷ್ಟು ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಂಡು ಮುನ್ನಡೆದಿದ್ದಾರೆ. ಈಗಿನ ಶಿಕ್ಷಣ ವ್ಯವಸ್ಥೆ ಸಾಕಷ್ಟು ಬದಲಾವಣೆಯಾಗಿದೆ. ಸರ್ಕಾರಗಳ ಹಲವಾರು ಸೌಲಭ್ಯಗಳು ಮಕ್ಕಳ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದರು. ದುಶ್ಚಟ ಹಾಗೂ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದು ಓದಿನತ್ತ ಹೆಚ್ಚು ಗಮನ ಹರಿಸುವ ಮೂಲಕ ಪ್ರತಿಭಾನ್ವಿತರಾಗಿ ಮುಖ್ಯ ವಾಹಿನಿಗೆ ಬಂದಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದೆ. ಶಿಕ್ಷಕರುಗಳ ಪರಿಶ್ರಮದಿಂದ ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಜ್ಯಮಟ್ಟದಲ್ಲೂ ಸಾಧನೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ನಿವೃತ್ತ ಯೋಧ ಲೋಕೇಶ್ ಮಾತನಾಡಿ, ವಿದ್ಯಾರ್ಥಿಗಳು ಯಶಸ್ಸು ಕಾಣಲು ಶಿಕ್ಷಣದಿಂದ ಮಾತ್ರ ಸಾಧ್ಯವಾಗಲಿದೆ. ಶಿಕ್ಷಣ ಕಲಿತ ವಿದ್ಯಾರ್ಥಿಗಳು ದೇಶ ಸೇವೆಯೊಂದಿಗೆ ಸೇನೆಗೆ ಸೇರ್ಪಡೆಗೊಂಡು ಸೇವಾ ಮನೋಭಾವದ ಸಾಧನೆಯೊಂದಿಗೆ ಮುನ್ನಡೆಯಬೇಕಾಗಿದೆ ಎಂದು ಹೇಳಿದ ಅವರು
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸೈಬರ್ ವಂಚಕರ ದಾಳಿ ಮುಂದುವರೆದಿದ್ದು, ಸಾರ್ವಜನಿಕರು ಎಚ್ಚರವಹಿಸಬೇಕಾಗಿದೆ. ವಿದ್ಯಾರ್ಥಿಗಳು ಶಿಕ್ಷಣ ಹಾಗು ಕ್ರೀಡೆಯೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದರು.
ಶಾಲಾ ಮುಖ್ಯ ಶಿಕ್ಷಕಿ ಎಚ್.ಎ.ರಾಜಮ್ಮ ಮಾತನಾಡಿ, ಇಲಾಖೆ ಹಾಗೂ ದಾನಿಗಳ ಸಹಕಾರದಿಂದ ಶಾಲೆ ಮುಂದುವರಿಯುತ್ತಿದ್ದು, ಶಿಕ್ಷಣ ಹಾಗೂ ಕ್ರೀಡೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಜಿಲ್ಲೆ ರಾಜ್ಯಮಟ್ಟದಲ್ಲೂ ಗುರುತಿಸಿಕೊಂಡು ಹಲವು ಪ್ರಶಸ್ತಿಗಳೊಂದಿಗೆ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಲು ಶಿಕ್ಷಕರಗಳು ಮುಂದಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸುವ ಮೂಲಕ
ಉತ್ತಮ ಭವಿಷ್ಯ ರೂಪಿಸಲು ಸಹಕಾರ ನೀಡಬೇಕಾಗಿದೆ ಎಂದರು. ಇದೇ ಸಂದರ್ಭ ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ ಹಾಗೂ ಶಾಲಾ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನಸೆಳೆಯಿತು. ಸಮಾರಂಭದಲ್ಲಿ ದೇಶ ಸೇವೆ ಸಲ್ಲಿಸಿ ನಿವೃತ್ತ ಯೋಧ ಲೋಕೇಶ್ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ ಗಾಗೂ ಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲೆ, ರಾಜ್ಯ ಮಟ್ಟದ ವಿವಿಧ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಂಕರ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವಿಜು, ಠವಿ,ಶಿವಲಿಂಗ, ಕಾಫಿ ಬೆಳೆಗಾರ ವಾಟೇರಿರ ಸುರೇಶ್, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕಾವೇರಮ್ಮ, ಇಸಿಓ ಕವೀತಾ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಮಣಿಕಂಠ, ಸದಸ್ಯ ಉದಯ, ಪಾಲಿಬೆಟ್ಟ ಸಿ.ಆರ್.ಪಿ ಕರುಂಬಯ್ಯ,ಸಾಗರ್ ಸಂಘದ ಅಧ್ಯಕ್ಷ ರತೀಸ್ ಸೇರಿದಂತೆ ಶಾಲಾ ಶಿಕ್ಷಕರುಗಳು,ಪೋಷಕರು,ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.