ಸುಂಟಿಕೊಪ್ಪ ಫೆ.1 NEWS DESK : ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯವಾಗಿ ಪರಸ್ಪರ ಎದುರಾಳಿಗಳೇ ಹೊರತು ಅಭಿವೃದ್ಧಿ ವಿಷಯ ಬಂದಾಗ ಎಲ್ಲರೂ ಒಂದಾಗಿ ಸಾಗಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‍ಗೌಡ ಕರೆ ನೀಡಿದರು. ಲೋಟಸ್ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಾರುಕಟ್ಟೆ ಸೇರಿದಂತೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ರೂ.40 ಲಕ್ಷ ಮೊತ್ತದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ರಾಜ್ಯದ ಎಲ್ಲಾ ಶಾಸಕರುಗಳು ತಲಾ ರೂ.10 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಮೊದಲೇ ಮಂಜೂರಾಗಿರುವ ಆರೋಗ್ಯ ಇಲಾಖೆಯ ನಿಗಧಿತ ಅನುದಾನ ಬರ ಪರಿಹಾರ, ಮಳೆ ಪರಿಹಾರಕ್ಕೆ ತಾಲ್ಲೂಕು ಪಂಚಾಯಿತಿ ಅನುದಾನದ ಅಡಿಯಲ್ಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶುಂಕುಸ್ಥಾಪನೆ ನೇರವೇರಿಸಲಾಗಿದೆ. ಗ್ರಾ.ಪಂ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಗುಣಮಟ್ಟದ ಕಾಮಗಾರಿಯನ್ನು ಪರಿಶೀಲಿಸಬೇಕೆಂದು ಸಲಹೆ ನೀಡಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 7 ವಾರ್ಡ್‍ಗಳಿದ್ದು, ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದೂ ಇನ್ನೂ ಅಭಿವೃದ್ಧಿ ಕಾಣಬೇಕಾಗಿದೆ. ಅನೇಕ ರಸ್ತೆಗಳು ಬಸ್ ನಿಲ್ದಾಣ, ಪ್ರವಾಸಿ ಮಂದಿರ ಹಾಗೂ ಸುಸಜ್ಜಿತ ಮಾರುಕಟ್ಟೆ ಸೇರಿದಂತೆ ಹಲವಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಬೇಕಾಗಿದೆ. ಮುಂದಿನ ದಿನಗಳಲ್ಲಿ ಹಂತವಾಗಿ ಪೂರ್ಣಗೊಳಿಸಲಾಗುವುದೆಂದು ಭರವಸೆ ನೀಡಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಉಪಾಧ್ಯಕ್ಷೆ ಶಿವಮ್ಮ, ಪಿಡಿಓ ವಿ.ಜಿ.ಲೋಕೇಶ್, ಗ್ಯಾರಂಟಿ ಅನುಷ್ಠಾನ ಸಮತಿ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಜಿ.ಪಂ.ಮಾಜಿ ಸದಸ್ಯ ಪಿ.ಎಂ.ಲತೀಫ್, ನಗರಾಧ್ಯಕ್ಷ ರಫೀಕ್ ಖಾನ್, ಹೋಬಳಿ ಅಧ್ಯಕ್ಷ ರಜಾಕ್, ಅಲ್ಪಸಂಖ್ಯಾತರ ಅಧ್ಯಕ್ಷ ಅಬ್ಧುಲ್‍ಅಜೀಜ್,ಪಂಚಾಯಿತಿ ಸದಸ್ಯರುಗಳಾದ ನಾಗರತ್ನ, ಪಿ.ಎಫ್.ಸಬಾಸ್ಟಿನ್, ಸೋಮನಾಥ್, ಆಲಿಕುಟ್ಟಿ,ಪ್ರಸಾದ್‍ಕುಟ್ಟಪ್ಪ,ಶಬೀರ್,ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.