ಮಡಿಕೇರಿ ಫೆ.1 NEWS DESK : ವಿರಾಜಪೇಟೆ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ವಿಶೇಷ ಸಭೆಯು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು. ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳ ಅಭಿವೃದ್ಧಿಯ ಕುರಿತು ಮಾಹಿತಿ ಪಡೆದ ಶಾಸಕರು, ಮುಂದೆ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗಳ ಬ್ಲೂಪ್ರಿಂಟ್ ನೀಡಬೇಕೆಂದು ಸೂಚನೆ ನೀಡಿದರು. ಈ ಸಂದರ್ಭ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ನಗರ ಕಾಂಗ್ರೆಸ್ ಅಧ್ಯಕ್ಷರು, ತಮ್ಮ ಕುಂದು ಕೊರತೆಗಳನ್ನು ಶಾಸಕರ ಗಮನಕ್ಕೆ ತಂದರು. ಅಲ್ಲದೇ ಅಭಿವೃದ್ಧಿ ಕಾಮಗಾರಿಗೆ ಬೇಕಾದ ಅನುದಾನಗಳ ಕೊರತೆ ನೀಗಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು. ಬಳಿಕ ಮಾತನಾಡಿದ ಶಾಸಕರು ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳ ಜನಸಾಮಾನ್ಯರಿಗೆ ನಿತ್ಯ ಜೀವನ ನಡೆಸುವಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರಲ್ಲದೆ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.