ಕುಶಾಲನಗರ ಫೆ.5 NEWS DESK : ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿಯಲ್ಲಿ ಗಿರಿಜನರ ಶ್ರೇಯೋಭಿವೃದ್ಧಿಗಾಗಿ ಆರಂಭಗೊಂಡ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘವು ಮೂರು ಸಾವಿರಕ್ಕೂ ಹೆಚ್ಚಿನ ಸದಸ್ಯರನ್ನು ಹೊಂದಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ತಪ್ಪಿನಿಂದ ಬಹುತೇಕ ಸದಸ್ಯರು ಮತದಾನದಿಂದ ವಂಚಿತಗೊಂಡಿದ್ದಾರೆ ಎಂದು ಗಿರಿಜನ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲ್ಯಾಂಪ್ಸ್ ಸೊಸೈಟಿ ಮಾಜಿ ಅಧ್ಯಕ್ಷ ಆರ್.ಕೆ.ಚಂದ್ರು, ಲ್ಯಾಂಪ್ಸ್ ಸಂಘದಲ್ಲಿ ಕೇವಲ 177 ಮಂದಿ ಸದಸ್ಯರು ಮಾತ್ರ ಮತದಾರರ ಪಟ್ಟಿಯಲ್ಲಿ ಇದ್ದಾರೆ. ಇನ್ನೂ ಬಹುತೇಕ ಸದಸ್ಯರನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೈಬಿಡಲಾಗಿದೆ ಎಂದು ಆರೋಪಿಸಿದರು. ಸಂಘದ ಷೇರು ಹಣ ಭರ್ತಿ ಮಾಡುವ ಬಗ್ಗೆ ಸದಸ್ಯರಿಗೆ ಯಾವುದೇ ನೋಟಿಸ್ ನೀಡಿಲ್ಲ. ಕಾಲಾವಕಾಶ ಕೂಡ ನೀಡಿಲ್ಲ ಎಂದು ದೂರಿದ ಅವರು, ಇದರಿಂದ ಸದಸ್ಯರಿಗೆ ಮಾಹಿತಿ ಕೊರತೆಯಿಂದ ಸಂಘದ ಹಣ ರೂ.1000 ಪಾವತಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಸದಸ್ಯರು ಮತದಾನದಿಂದ ವಂಚಿತರಾಗಿದ್ದಾರೆ ಎಂದರು. ಸಂಬಂಧಿಸಿದ ಅಧಿಕಾರಿಗಳು ಸರ್ಕಾರದಿಂದ ಬರುವ ಅನುದಾನದಲ್ಲಿ ಸದಸ್ಯರ ಷೇರು ಹಣವನ್ನು ಬಳಕೆ ಮಾಡದೆ ಏಕ ಪಕ್ಷಿಯ ನಿರ್ಧಾರ ಕೈಗೊಂಡಿರುವುದು ಇದಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸೋಲಿಗ ಗಿರಿಜನ ಸಂಘದ ಅಧ್ಯಕ್ಷ ಬಿ.ಪಿ.ಮಹೇಶ್ ಮಾತನಾಡಿ, 1965ರಲ್ಲಿ ಪ್ರತ್ಯೇಕವಾದ ಲ್ಯಾಂಪ್ಸ್ ಸಹಕಾರ ಸಂಘ ಸ್ಥಾಪನೆಗೊಂಡಿತು. ಮಾಜಿ ಅಧ್ಯಕ್ಷರಾದ ಕಾಳಪ್ಪ, ನಾಗೇಂದ್ರ, ತಮ್ಮಯ್ಯ, ಜೆ.ಪಿ.ರಾಜು, ಚಂದ್ರು ಅವರು ಸೊಸೈಟಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುವ ಮೂಲಕ ಲಾಭದತ್ತ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಬಂದ ಅಧ್ಯಕ್ಷರು ಸಂಘದ ಹಣವನ್ನು ದುರುಪಯೋಗ ಮಾಡಿಕೊಂಡ ಪರಿಣಾಮ ಸಂಘದ ಅಭಿವೃದ್ಧಿ ಕುಂಠಿತಗೊಂಡಿತು ಎಂದು ದೂರಿದರು. ಫೆ.13 ರಂದು ಸಂಘದ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಸದಸ್ಯರು ನೈಜ ಗಿರಿಜನ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಮೂಲಕ ಲ್ಯಾಂಪ್ಸ್ ಸೊಸೈಟಿ ಉಳಿಸಿ ಆದಿವಾಸಿ ಸಮುದಾಯದ ಏಳಿಗೆ ಕಾಣುವಂತಾಗಬೇಕು ಎಂದು ಮನವಿ ಮಾಡಿದರು. ಕರ್ನಾಟಕ ಜೇನು ಕುರುಬರ ಸಂಘಟನಾ ಕಾರ್ಯದರ್ಶಿ ಜೆ.ಟಿ.ಕಾಳಿಂಗ ಮಾತನಾಡಿ, ಕೆಲವು ವ್ಯಕ್ತಿಗಳು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನೈಜ ಗಿರಿಜನರಿಗೆ ಸಿಗಬೇಕಾದ ಸೌಲಭ್ಯಗಳನ್ನು ವಂಚಿಸಿ ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗಿರಿಜನರ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರ ಹಾಗೂ ನೀಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ಹೇಳಿದರು. ಗಿರಿಜನರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ತೀವ್ರ ಹೋರಾಟ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮಹೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸೋಲಿಗರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಬಿ.ಹೆಚ್.ಸಿದ್ಧಲಿಂಗ, ಗಿರಿಜನ ಮುಖಂಡರಾದ ಜೆ.ಕೆ.ನಂಜಯ್ಯ, ಜೆ.ಎನ್.ವಸಂತ ಉಪಸ್ಥಿತರಿದ್ದರು.











