



ಮಡಿಕೇರಿ ಫೆ.6 NEWS DESK : ಮಡಿಕೇರಿ ನಗರದಲ್ಲಿರುವ ಡಾ.ಅಂಬೇಡ್ಕರ್ ಭವನ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಯ ನೇತೃತ್ವದಲ್ಲಿ ನಿಯಮಾನುಸಾರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದನ್ನು ಸಹಿಸದ ಕೆಲವು ವ್ಯಕ್ತಿಗಳು ಡಾ.ಅಂಬೇಡ್ಕರ್ ಭವನ ಸಮಿತಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಹಾಗೂ ಅಶೋಕಪುರ ಸಮಿತಿಯ ಸದಸ್ಯ ಹೆಚ್.ಎನ್.ಯೋಗೇಶ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಡಾ.ಅಂಬೇಡ್ಕರ್ ಭವನ ಸಮಿತಿಯ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಅವರು ಸಾಮಾಜಿಕ ಕಳಕಳಿ ಇರುವ ವ್ಯಕ್ತಿಯಾಗಿದ್ದಾರೆ. ಡಾ.ಅಂಬೇಡ್ಕರ್ ಭವನವನ್ನು ದಲಿತರು ಸೇರಿದಂತೆ ಎಲ್ಲಾ ವರ್ಗದವರಿಗೂ ಸಾಮಾಜಿಕ ಚಟುವಟಿಕೆ ಮತ್ತು ಸಭೆಗಳನ್ನು ನಡೆಸಲು ಯಾವುದೇ ಆಕ್ಷೇಪಣೆ ಇಲ್ಲದೆ ನೀಡುತ್ತಾ ಬಂದಿದ್ದಾರೆ. ಭವನದ ಕಾರ್ಯಚಟುವಟಿಕೆ ನಿಯಮಾನುಸಾರ ನಡೆಯುತ್ತಿದ್ದು, ಎಲ್ಲಾ ದಾಖಲೆ ಮತ್ತು ಲೆಕ್ಕಪತ್ರಗಳು ಸಮಿತಿಯ ಬಳಿ ಇದೆ. ಈ ಬಗ್ಗೆ ಸಮಿತಿಯನ್ನು ನೇರವಾಗಿ ಸಂಪರ್ಕಿಸಿ ಮಾಹಿತಿ ಪಡೆಯದೆ ದುರುದ್ದೇಶದಿಂದ ಕೆಲವರು ತೇಜೋವಧೆ ಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದು, ಇದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರಿಶಿಷ್ಟ ಸಮುದಾಯದ ನಡುವೆ ಒಗ್ಗಟ್ಟು ಕಾಯ್ದುಕೊಳ್ಳುವ ಬದಲು ಒಡಕು ಮೂಡಿಸುವ ಪ್ರಯತ್ನ ನಡೆಯುತ್ತಿದೆ. ತಮ್ಮ ಸ್ವಾರ್ಥಕ್ಕಾಗಿ ಬಹಿರಂಗವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಡಾ.ಅಂಬೇಡ್ಕರ್ ಭವನ ಸಮಿತಿಯ ವಿರುದ್ಧ ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಸುಳ್ಳು ವದಂತಿಗಳನ್ನು ಹಬ್ಬಿಸಿ ಹಾದಿ ತಪ್ಪಿಸುವ ವ್ಯಕ್ತಿಗಳ ಬಗ್ಗೆ ಪರಿಶಿಷ್ಟರು ಎಚ್ಚೆತ್ತುಕೊಳ್ಳಬೇಕೆಂದು ಹೆಚ್.ಎನ್.ಯೋಗೇಶ್ ಕುಮಾರ್ ತಿಳಿಸಿದ್ದಾರೆ.