![](https://newsdeskkannada.com/wp-content/uploads/2025/02/Z-ND-ADVT-16.jpg)
![](https://newsdeskkannada.com/wp-content/uploads/2025/02/Z-GL-2-8.jpg)
ಮಡಿಕೇರಿ NEWS DESK ಫೆ.15 : ಮಡಿಕೇರಿ ನಗರದ ಡಾ.ಅಂಬೇಡ್ಕರ್ ಭವನದ ಎದುರು ಅಳವಡಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿದ್ದ ಬ್ಯಾನರ್ ಮತ್ತು ಅಂಬೇಡ್ಕರ್, ಬುದ್ಧ ಸಹಿತ ಹಿರಿಯ ಚೇತನರ ಭಾವಚಿತ್ರಗಳಿದ್ದ ಮತ್ತೊಂದು ಬ್ಯಾನರ್ ನ್ನು ಸುಟ್ಟ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ನ್ಯಾಯ ಕೋರಿ ಪ್ರತಿಭಟನೆ ನಡೆಸುವ ಹಕ್ಕನ್ನು ಎಲ್ಲರಿಗೂ ಸಂವಿಧಾನ ನೀಡಿದೆ. ಡಾ.ಅಂಬೇಡ್ಕರ್ ಭವನದ ವಿಚಾರವಾಗಿ ವಿವಿಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಇದರ ಭಾಗವಾಗಿ ಬ್ಯಾನರ್ ಅಳವಡಿಸಲಾಗಿತ್ತು. ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಕಿಡಿಗೇಡಿಗಳು ಬ್ಯಾನರ್ ನ್ನು ಸುಟ್ಟು ಹಾಕಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ಯಾನರ್ ಗಳಿಗೆ ಬೆಂಕಿ ಹಚ್ಚುವ ಮೂಲಕ ಅದರಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್, ಬುದ್ಧ ಸೇರಿದಂತೆ ಮಹನೀಯರ ಭಾವಚಿತ್ರಗಳಿಗೆ ಅಗೌರವ ತೋರಲಾಗಿದೆ. ಪೊಲೀಸ್ ಇಲಾಖೆ ಪ್ರಕರಣವನ್ನು ಲಘುವಾಗಿ ಕಾಣದೆ ಗಂಭೀರವಾಗಿ ಪರಿಗಣಿಸಬೇಕು ಮತ್ತು ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಗಾಯತ್ರಿ ನರಸಿಂಹ ಆಗ್ರಹಿಸಿದ್ದಾರೆ.