![](https://newsdeskkannada.com/wp-content/uploads/2025/02/Z-ND-ADVT-16.jpg)
![](https://newsdeskkannada.com/wp-content/uploads/2025/02/Z-ADVT-TEACHERS-10.jpg)
![](https://newsdeskkannada.com/wp-content/uploads/2025/02/Z-SRI-SAI-INSURENCE-8.jpg)
ಮಡಿಕೇರಿ ಫೆ.15 NEWS DESK : ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿರಾಜಪೇಟೆ ಬಿಜೆಪಿ ಮಂಡಲ ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಜ್ಯದ ಭವಿಷ್ಯದ ದೃಷ್ಟಿಯಿಂದ ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು, ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಹಿಂದಿನ ಬಿಜೆಪಿ ಸರ್ಕಾರ ಜಿಲ್ಲೆಗೊಂದು ವಿಶ್ವ ವಿದ್ಯಾಲಯ ಎಂಬ ಗುರಿಯೊಂದಿಗೆ ಕೊಡಗು ಸೇರಿದಂತೆ 9 ಜಿಲ್ಲೆಗಳಲ್ಲಿ ನೂತನ ವಿವಿಯನ್ನು ಸ್ಥಾಪಿಸಿತು. ಆದರೆ ಇದೀಗ ರಾಜ್ಯವನ್ನು ಆಳುತ್ತಿರುವ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯವನ್ನು ಕಡೆಗಣಿಸಿ ವಿವಿಗಳನ್ನು ಮುಚ್ಚುವ ನಿರ್ಧಾರ ಮಾಡಿರುವುದು ಖಂಡನೀಯವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅತ್ಯಂತ ಮಹತ್ವಾಕಾಂಕ್ಷೆಯಿಂದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಿಂದಿನ ಬಿಜೆಪಿ ಸರ್ಕಾರ ನೂತನ ವಿವಿಯನ್ನು ಸ್ಥಾಪಿಸಿತು. ಈ ಹಂತದಲ್ಲೇ ವಿಧಾನಸಭಾ ಚುನಾವಣೆಯೂ ಘೋಷಣೆಯಾದ ಹಿನ್ನೆಲೆ ವಿವಿಗಳಿಗೆ ನೀಡಬೇಕಾದ ಅನುದಾನ ಮತ್ತು ಸೌಲಭ್ಯಗಳನ್ನು ಪೂರೈಸಲು ಸಾಧ್ಯವಾಗಿರಲಿಲ್ಲ. ಒಂದು ವೇಳೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರೆ ವಿವಿಗಳಿಗೆ ನೀಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಿ ಸದೃಢಗೊಳಿಸಲಾಗುತ್ತಿತ್ತು. ಆದರೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಖಜಾನೆ ಖಾಲಿ ಮಾಡಿಕೊಂಡು ಕುಳಿತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ಇದೀಗ ಖರ್ಚು ವೆಚ್ಚವನ್ನು ಕುಗ್ಗಿಸುವ ಸಲುವಾಗಿ ಶಿಕ್ಷಣ ಮಂದಿರಕ್ಕೆ ಕೈಹಾಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವೇ ಕಳೆದಿದೆ. ಆದರೆ ನೂತನ ವಿವಿಗಳಿಗೆ ಬೇಕಾದ ಅನುದಾನ ಮತ್ತು ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ವಿಫಲವಾಗಿದೆ. ಇದೇ ಕಾರಣದಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ಥಾಪನೆಯಾಗಿರುವ ವಿವಿಗಳಿಗೆ ಅಗತ್ಯ ಅನುದಾನ ನೀಡಲು ಸರ್ಕಾರ ಮುಂದಾಗಬೇಕು. ಯುವ ಸಮೂಹ ಶಿಕ್ಷಣದ ಮೂಲಕ ದೇಶ ಕಟ್ಟಬೇಕಾಗಿದೆ. ಕೊಡಗು ವಿವಿ ಮುಚ್ಚುವುದಕ್ಕೆ ಬಿಜೆಪಿ ಎಂದಿಗೂ ಬಿಡುವುದಿಲ್ಲ, ಒಂದು ವೇಳೆ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ ಹೋರಾಟ ಹಾದಿ ಹಿಡಿಯಬೇಕಾಗುತ್ತದೆ ಎಂದು ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ.