ಮಡಿಕೇರಿ ಫೆ.18 NEWS DESK : ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚದಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿ ಎಬಿವಿಪಿ ಪ್ರಮುಖರು ಹಾಗೂ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕೊಡಗು ಮತ್ತು ಇತರೆ ಹಿಂದುಳಿದ ಜಿಲ್ಲೆಗಳಲ್ಲಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದರು. ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಬಲಿಷ್ಠಗೊಳಿಸುವ ಕಾಳಜಿ ಮತ್ತು ಇಚ್ಛಾಶಕ್ತಿಯನ್ನು ರಾಜ್ಯ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಇತ್ತೀಚೆಗೆ ಖಾಸಗಿ ವಿಶ್ವವಿದ್ಯಾಲಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವುದರಿಂದ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಸಾವಿರಾರು ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಕೊಟ್ಟಿದೆ. ಆದರೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಣ ಒದಗಿಸುವುದಕ್ಕೆ ಆಗದೆ ವಿಶ್ವವಿದ್ಯಾನಿಯಗಳನ್ನು ಮುಚ್ಚಲು ಮುಂದಾಗಿರುವುದು ಖಂಡನೀಯ. ಈ ನಿರ್ಧಾರವನ್ನು ಹಿಂಪಡೆದು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು. ಸರ್ಕಾರಿ ಪದವಿ ಕಾಲೇಜು, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಮಹಿಳಾ ಕಾಲೇಜು ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಮೂಲಕ ತೆರಳಿದ ವಿದ್ಯಾರ್ಥಿಗಳು ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.











