
ಮೈಸೂರು, ಮಾ.3 NEWS DESK : ಪ್ರಸಕ್ತ ತಿಂಗಳಿನಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಗಳು ನಡೆಯುತ್ತಿರುವುದರಿಂದ ಬಸ್ ಸಂಚಾರ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್, ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳಿಗೆ ಪೂರಕವಾಗಿ ಸೇವೆಯನ್ನು ಕಲ್ಪಿಸಬೇಕಾಗಿದೆ. ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆಯ ಬಸ್‌ಗಳ ಮೇಲೆ ಹೆಚ್ಚು ಅವಲಂಬಿತವಾಗಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಸೇವೆ ನೀಡಬೇಕಾಗಿದೆ ಎಂದು ಸಂಸದರು ತಿಳಿಸಿದ್ದಾರೆ. ಪರೀಕ್ಷೆ ಸಮಯದಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ನಿಲ್ದಾಣಕ್ಕೆ ಬರುತ್ತಿಲ್ಲ. ಒಂದು ವೇಳೆ ಬಂದರೂ ನಿಲ್ದಾಣದಲ್ಲಿ ನಿಲ್ಲಿಸದೇ ತೆರಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಕೆಲವು ವಿದ್ಯಾರ್ಥಿಗಳು ನನಗೂ ದೂರು ಸಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್ ಸೇವೆ ಕಲ್ಪಿಸಬೇಕು ಎಂದು ಯದುವೀರ್ ಒತ್ತಾಯಿಸಿದ್ದಾರೆ. ಕೆಲವು ಕಡೆ ಬಸ್‌ಗಳು ಬಂದರೂ ಅದನ್ನು ಸರಿಯಾದ ಸ್ಥಳದಲ್ಲಿ ನಿಲ್ಲಿಸದೇ ಮುಂದೆ ಹೋಗುತ್ತಿರುವ ಬಗ್ಗೆಯೂ ದೂರುಗಳು ಬಂದಿದ್ದು, ಇದರ ಬಗ್ಗೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಚಾಲಕರಿಗೆ, ನಿರ್ವಾಹಕರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆದೊಯ್ಯಲು ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಆಗ್ರಹಿಸಿದ್ದಾರೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಿದ್ದೇನೆ. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆ ಸಾರಿಗೆ ಸಂಸ್ಥೆಯು ಸೇವೆಯನ್ನು ನೀಡಲು ಮುಂದಾಗಬೇಕು ಎಂದು ಸಂಸದ ಯದುವೀರ್ ಸ್ಪಷ್ಟಪಡಿಸಿದ್ದಾರೆ.









