ಬೆಂಗಳೂರು NEWS DESK ಮಾ.7 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ನಲ್ಲಿ ಕೊಡಗು ಜಿಲ್ಲೆಯ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು. ಕುಶಾಲನಗರ ತಾಲ್ಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು. ರಾಜ್ಯದ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಒಟ್ಟು 650 ಕೋಟಿ ರೂ. ಗಳನ್ನು ಘೋಷಿಸಲಾಗಿದೆ. ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂದು ವಿವರಿಸಿದ್ದಾರೆ.










