


ಮಡಿಕೇರಿ, ಮಾ.8 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕ ನಡೆಸಿದ ಅಹೋರಾತ್ರಿ ಧರಣಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ಪಾಲ್ಗೊಂಡರು. ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿರುವ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು, ಸರ್ಕಾರಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬಾರದು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಸಂಸದ ಯದುವೀರ್, ಮಾಜಿ ಸಚಿವರಾದ ಡಾ. ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಮುಖಂಡರು ಭೇಟಿ ನೀಡಿ ತಮ್ಮ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಯದುವೀರ್, ನನ್ನ ಕ್ಷೇತ್ರ ವ್ಯಾಪ್ತಿಯ ಕೊಡಗು ಜಿಲ್ಲೆಯ ವತಿಯಿಂದ ಜಿಲ್ಲೆಯ ಜನತೆಯ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ನಾವು ವಿರಮಿಸುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರದ ಗಮನಕ್ಕೆ ತಂದು ಪರಿಹಾರ ಸಿಗುವವರೆಗೆ ಹೋರಾಟ ನಡೆಸುತ್ತೇವೆ ಎಂದರು. ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದೆ. ಈಗ ಗ್ಯಾರಂಟಿ ಯೋಜನೆಗಳಿಗೆ ಇತರೆ ಅನುದಾನಗಳನ್ನು ಬಳಸಿ, ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿದೆ. ಅತ್ಯಂತ ಬೇಜವಾಬ್ದಾರಿಯುತ ಸರ್ಕಾರ ಇದಾಗಿದೆ ಎಂದು ಸಂಸದ ಯದುವೀರ್ ಕಿಡಿಕಾರಿದರು. ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದೇ ಕಾಲ ಕಳೆಯುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು. ಕೊಡಗು ವಿಶ್ವವಿದ್ಯಾಲಯ ಸೇರಿದಂತೆ ನೂತನ ವಿವಿಗಳನ್ನು ಮುಚ್ಚಬಾರದು ಎಂದು ಈಗಾಗಲೇ ಪ್ರತಿಭಟನೆ ನಡೆಸಲಾಗಿದ್ದು, ಸರ್ಕಾರದ ಗಮನಕ್ಕೂ ಇದನ್ನು ತರಲಾಗಿದೆ. ಕೊಡಗು ವಿವಿ ಉಳಿಸಬೇಕು ಎಂಬುದು ನಮ್ಮ ಒಕ್ಕೊರಲ ಕೂಗು ಆಗಿದೆ ಎಂದು ತಿಳಿಸಿದರು. ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದರು. ಬಿಜೆಪಿ ಹಿರಿಯ ಮುಖಂಡರು, ಸ್ಥಳೀಯ ನಾಯಕರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಸಾವಿರಾರು ಮಂದಿ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.