


ಮಡಿಕೇರಿ NEWS DESK ಮಾ.9 : ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸರಬರಾಜು ಮಾಡುತಿದ್ದ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರಿನ ಸತ್ಯನಗರದ ನಿವಾಸಿ ಇಲಿಯಾಸ್ (47) ಬಂಧಿತ ಆರೋಪಿಯಾಗಿದ್ದು, 30 ಕೆಜಿ 550 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ವಿರಾಜಪೇಟೆ ನಗರದ ನಿಸರ್ಗ ಬಡಾವಣೆಯ ಕಿರುಮಕ್ಕಿ ಜಂಕ್ಷನ್ ಸಮೀಪ ಗಾಂಜಾ ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಡಿವೈಎಸ್‌ಪಿ ಮಹೇಶ್ ಕುಮಾರ್.ಎಸ್, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಪಿಎಸ್‌ಐ ವಾಣಿ ಶ್ರೀ ಬಿ.ಎಸ್ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿದರು. ಪೊಲೀಸರ ಕಾರ್ಯದಕ್ಷತೆಯ ಕುರಿತು ಶ್ಲಾಘನೆ ವ್ಯಕ್ತಪಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು, ಮಾದಕ ವಸ್ತು ದಂಧೆ ಕುರಿತು ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.