


ಮಡಿಕೇರಿ NEWS DESK ಮಾ.13 : ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ಗ್ರಾಮದ ಕಾಫಿ ತೋಟವೊಂದರಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೋಟದ ರೈಟರ್ ವಿರುದ್ಧ ಅರಣ್ಯ ಇಲಾಖೆ ಕ್ರಮ ಕೈಗೊಂಡಿರುವುದನ್ನು ವಿರೋಧಿಸಿ ಮಾ.14ರಂದು ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸಂಘಟನೆಗಳು ನಿರ್ಧರಿಸಿವೆ. ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪದಲ್ಲಿ ಇಂದು ಸಭೆ ನಡೆಸಿದ ರೈತ ಸಂಘ ಮತ್ತು ಕಾರ್ಮಿಕ ಸಂಘಟನೆಗಳ ಪ್ರಮುಖರು ಕಾಡಾನೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತೋಟದ ರೈಟರ್ ಜೋಸೆಫ್ ಅವರ ವಿರುದ್ಧ ಪ್ರಕರಣ ದಾಖಲು ಮಾಡಿರುವುದನ್ನು ಖಂಡಿಸಿದರು. ವಿನಾಕಾರಣ ಜೋಸೆಫ್ ಅವರನ್ನು ತನಿಖೆಗೆ ಒಳಪಡಿಸಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಕುಟುಂಬದ ಸದಸ್ಯರು ಆರೋಪಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಸಿದ್ದಾಪುರ ಘಟಕದ ಅದ್ಯಕ್ಷ ದೇವಣೀರ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೋಸೆಫ್ ಅವರ ವಿರುದ್ಧ ಹೂಡಲಾಗಿರುವ ಪ್ರಕರಣವನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಮಾ.14 ರಂದು ಸಂಜೆ 5ಗಂಟೆಗೆ ಸಿದ್ದಾಪುರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಯಿತು. ರೈತ ಸಂಘದ ಅಮ್ಮತ್ತಿ ಹೋಬಳಿಯ ಅಧ್ಯಕ್ಷ ಮಂಡೇಪಂಡ ಪ್ರವೀಣ್ ಬೋಪಯ್ಯ, ಜಿಲ್ಲಾ ಸಮಿತಿ ಖಜಾಂಚಿ ಇಟ್ಟಿರ ಸಬಿತಾ ಭೀಮಯ್ಯ, ಅಪ್ಪಾರಂಡ ಬಿದ್ದಪ್ಪ, ಕಾರ್ಮಿಕ ಸಂಘಟನೆಯ ಪ್ರಮುಖರಾದ ಪಿ.ಆರ್.ಭರತ್, ಎನ್.ಡಿ.ಕುಟ್ಟಪ್ಪ. ಹೆಚ್.ಬಿ.ರಮೇಶ್, ರೈಟರ್ ಜೋಸೆಫ್ ಅವರ ಪುತ್ರಿ, ಪುತ್ರ ಹಾಗೂ ತಂಗಿ, ತೋಟದ ಮಾಲೀಕ ಲೆಸ್ಲಿ ಪಿಂಟೊ, ಕರ್ನಾಟಕ ರಾಜ್ಯ ರೈತ ಸಂಘದ ಸಿದ್ದಾಪುರ ಹೋಬಳಿಯ ಸದಸ್ಯರು, ಕಾರ್ಮಿಕ ಸಂಘಟನೆಯ ಸದಸ್ಯರು ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. (ವರದಿ : ಕಿಶೋರ್ ಕುಮಾರ್ ಶೆಟ್ಟಿ)