


ಮಡಿಕೇರಿ NEWS DESK ಮಾ.14 : ವಿದ್ಯಾರ್ಥಿ ಜೀವನದಲ್ಲಿ ನಾವು ಏನನ್ನು ಪಡೆಯುತ್ತೇವೆಯೋ ಅದನ್ನೇ ಬದುಕಿನಲ್ಲೂ ಅಳವಡಿಸಿಕೊಳ್ಳುತ್ತೇವೆ. ಆದ್ದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಸ್ತು ಮತ್ತು ತಾಳ್ಮೆಯನ್ನು ಮೈಗೂಡಿಸಿಕೊಂಡು ಯಶಸ್ಸನ್ನು ಸಾಧಿಸಬೇಕೆಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕರೆ ನೀಡಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ಹಳೇ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಸಮಾಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸಬೇಕಾದರೆ ಪೋಷಕರ ಹಾಗೂ ಶಿಕ್ಷಕರ ಆಶೀರ್ವಾದ ಮುಖ್ಯ, ಜೊತೆಯಲ್ಲಿ ಒಳ್ಳೆತನ ಮತ್ತು ತಾಳ್ಮೆ ಅಗತ್ಯ. ಪೋಷಕರು ಮಕ್ಕಳ ತಪ್ಪುಗಳನ್ನು ತಿದ್ದಿ ಅವರಲ್ಲಿ ಮೌಲ್ಯಗಳನ್ನು ತುಂಬುತ್ತಾರೆ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಿಸುವ ಕಾರ್ಯವನ್ನು ಮಾಡುತ್ತಾರೆ. ಅಲ್ಲದೆ ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ದೇಶಕ್ಕೆ ಕೊಡುಗೆಯಾಗಿ ನೀಡುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ನಂತರವೂ ಶಿಕ್ಷಕರನ್ನು ಸದಾ ಸ್ಮರಿಸುವಂತಾಗಬೇಕು ಎಂದು ಹೇಳಿದರು. ಇಡೀ ಭಾರತದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹೆಸರಿನಲ್ಲಿ ಎರಡೇ ಕಾಲೇಜು ಇದ್ದು, ವಿದ್ಯಾರ್ಥಿಗಳು ಕಾಲೇಜ್ ನ ಹೆಸರಿಗೆ ಧಕ್ಕೆ ತಾರದೆೆ ಶಿಸ್ತಿನಿಂದ ನಡೆದುಕೊಳ್ಳಬೇಕು. ವಿದ್ಯಾರ್ಥಿಗಳು ವಾಹನ ಚಲಾಯಿಸುವಾಗ ವೇಗವನ್ನು ಕಡಿಮೆ ಮಾಡಿಕೊಳ್ಳಬೇಕು, ಶೈಕ್ಷಣಿಕ ಜೀವನದಲ್ಲಿ ವೇಗವನ್ನು ಹೆಚ್ಚಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಪಠ್ಯದ ಜೊತೆಗೆ ಪಠ್ಯೇತರವಾಗಿಯೂ ಸಾಧನೆ ಮಾಡಿದ್ದು, ದೇಶಕ್ಕೆ ಹಲವು ಯೋಧರನ್ನು ನೀಡಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮುಂದೆ ಬರಬೇಕು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಎಲ್ಲಾ ಕಾರ್ಯಗಳಿಗೂ ಹಳೇ ವಿದ್ಯಾರ್ಥಿ ಸಂಘ ಸಂಪೂರ್ಣ ಸಹಕಾರ ನೀಡುವ ಮೂಲಕ ಕಾಲೇಜ್ ನ ಯಶಸ್ಸಿಗೆ ಸದಾ ಶ್ರಮಿಸಲಿದೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ಭರವಸೆ ನೀಡಿದರು. ವಾಣಿಜ್ಯಶಾಸ್ತç ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಎ.ಗಾಯತ್ರಿ ದೇವಿ ಮಾತನಾಡಿ, ವಿಶೇಷ ಜ್ಞಾನ ಪಡೆಯಲು ಶಿಕ್ಷಣ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಸಂಯಮವನ್ನು ಬೆಳೆಸಿಕೊಳ್ಳಬೇಕು ಮತ್ತು ಮಾದರಿ ಪ್ರಜೆಗಳಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಸುಖ ಜೀವನ ನಡೆಸಲು ಸಾಧ್ಯ ಎಂದರು.
ಪ್ರತಿಯೊಬ್ಬರಲ್ಲೂ ಪ್ರತಿಭೆ ಇರುತ್ತದೆ, ಆದರೆ ಉತ್ತಮ ವೇದಿಕೆ ಮತ್ತು ಪ್ರೋತ್ಸಾಹದ ಅಗತ್ಯವಿದೆ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡಾಗ ವಿದ್ಯಾರ್ಥಿಗಳು ಪ್ರಗತಿ ಸಾಧಿಸಲು ಸಾಧ್ಯ. ಫೀ.ಮಾ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿಗಳು ಒಗ್ಗೂಡಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಅವರು ವಿದ್ಯಾರ್ಥಿಗಳ ಸಾಧನೆಗೆ ಪೋಷಕರ ಬೆಂಬಲ, ನೈತಿಕ ಸ್ಥೈರ್ಯ, ತ್ಯಾಗ ಮನೋಭಾವ ಅತಿ ಮುಖ್ಯ. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಸನವಾಗುತ್ತದೆ ಎಂದರು.
ಪ್ರಸ್ತುತ ವರ್ಷದಲ್ಲಿ ವಿಶ್ವವಿದ್ಯಾಲಯಗಳ ಗೊಂದಲದಿಂದ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳು ಕಡಿಮೆಯಾಗಿದೆ. ಇದೀಗ ಹಳೇ ವಿದ್ಯಾರ್ಥಿಗಳ ಸಂಘದ ಸಹಕಾರದಿಂದ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ವಿದ್ಯಾರ್ಥಿಗಳು ಎಲ್ಲಾ ಕಾರ್ಯಕ್ರಮಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ಕಾಲೇಜು ಅಭಿವೃದ್ಧಿಗೆ ಸಹಕರಿಸಬೇಕು ಮತ್ತು ಶಿಕ್ಷಕರಿಗೆ ಸಹಕಾರ ನೀಡಬೇಕು ಎಂದು ಕರೆ ನೀಡಿದ ಅವರು, ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.
ಕ್ಷೇಮ ಪಾಲನಾ ಸಮಿತಿಯ ಸಂಯೋಜಕ ಪ್ರೊ.ಎಂ.ಪಿ.ಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಕೂಡ ಮುಖ್ಯವಾಗಿದ್ದು, ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿ ಸಂಘದ ಸಲಹೆಗಾರ ಪ್ರೊ.ಶ್ರೀಧರ್ ಹೆಗಡೆ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಅಪೇಕ್ಷೆ ಮೇರೆಗೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗಿದೆ, ವಿಶೇಷ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ತಿಳಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಎನ್.ವಿ.ಮಹೇಂದ್ರ ಮಾತನಾಡಿ, ಕಾಲೇಜ್ ನಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ವಿದ್ಯಾರ್ಥಿ ಸಂಘದ ಮೂಲಕ ಪ್ರಾಂಶುಪಾಲರಿಗೆ ವಿವಿಧ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಗಿತ್ತು. ಇದೀಗ ಕಾಲೇಜ್ ನ ಹಳೇ ವಿದ್ಯಾರ್ಥಿ ಸಂಘದ ಸಹಕಾರದಲ್ಲಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇನ್ನು ಮುಂದೆಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸುವಂತೆ ಕೇಳಿಕೊಳ್ಳಲಾಗಿದ್ದು, ಉತ್ತಮ ಕಾರ್ಯಕ್ರಮಗಳನ್ನು ರೂಪಿಸಲಾಗವುದೆಂದರು. ::: ಸನ್ಮಾನ ::: ಎನ್‌ಸಿಸಿಯಲ್ಲಿ ಸಾಧನೆ ಮಾಡಿದ ಹೇಮ್ ಮೊಣ್ಣಪ್ಪ, ಎಂ.ಆರ್.ಹೇಮಂತ್ ಹಾಗೂ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಪ್ರತಿಭಾ ಸಮಾಗಮ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಹಾಡುಗಾರಿಗೆ ಸ್ಪರ್ಧೆ, ಭಾಷಣ ಸ್ಪರ್ಧೆ, ನೃತ್ಯ ಸ್ಪರ್ಧೆ, ಸಾಂಪ್ರದಾಯಿಕ ಫ್ಯಾಷನ್ ಶೋ ನಡೆಯಿತು.
ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಪಿ.ನಾಗರಾಜ, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಹಾಗೂ ಪದಾಧಿಕಾರಿಗಳು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿಯರಾದ ಇಂಪನ ನಿರೂಪಿಸಿ, ಚಶ್ಮಿತ, ಎಂ.ಪಿ.ಮೋನಿಶ್, ವೈಶಾಲಿ ಅತಿಥಿಗಳ ಪರಿಚಯ ಮಾಡಿದರು.