


ಮಡಿಕೇರಿ ಮಾ.14 NEWS DESK : ಜಗತ್ತು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಿವು ಮೂಡಬೇಕಾದರೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಮತ್ತು ಸಾಮಾಜಿಕ ಜಾಲತಾಣಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಿ.ನವೀನ್ ಕುಮಾರ್ ಕರೆ ನೀಡಿದ್ದಾರೆ. 2023-24ನೇ ಸಾಲಿನಲ್ಲಿ ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತೀ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಉಪನ್ಯಾಸಕರು ಹಾಗೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಧಾನ ಭಾಷಣ ಮಾಡಿದ ಡಾ.ಬಿ.ಸಿ.ನವೀನ್ ಕುಮಾರ್, ಶಿಕ್ಷಣ ಮತ್ತು ಆರೋಗ್ಯ ದೇಶದ ಸಂಪತ್ತು, ವಿದ್ಯಾರ್ಥಿಗಳು ಓದಿನ ಜೊತೆಗೆ ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಪರಿಸ್ಥಿತಿಯ ಬಗ್ಗೆ ಚಿಂತಿಸಬೇಕು. ಸಾಮಾಜಿಕ ಜಾಲತಾಣಗಳು ವಿವಿಧ ಸ್ತರಗಳ ವ್ಯಕ್ತಿತ್ವ, ಪ್ರತಿಭೆ ಮತ್ತು ಸೃಜನ ಶೀಲತೆಯನ್ನು ಸಮಾಜಕ್ಕೆ ತೋರಿಸುತ್ತದೆ. ಇಡೀ ವಿಶ್ವ, ದೇಶದಲ್ಲಿ ಏನಾಗುತ್ತಿದೆ ಎಂಬುವುದರ ಕುರಿತು ಅರಿವು ಮೂಡಿಸುತ್ತದೆ. ಸಾಮಾಜಿಕ ಜಾಲತಾಣವನ್ನು ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಬಳಕೆ ಮಾಡಬೇಕು. ಮನುಷ್ಯ ತನ್ನ ಸ್ವಾತಂತ್ರ್ಯ ಕಳೆದುಕೊಂಡರೆ ಮಾನಸಿಕ ಸಮಸ್ಯೆಗೆ ಒಳಗಾಗುತ್ತಾನೆ. ಆದ್ದರಿಂದ ಸಾಮಾಜಿಕ ಜಾಲತಾಣವನ್ನು ಇತಿಮಿತಿಯೊಳಗೆ ನಮ್ಮ ಏಳಿಗೆಗಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು. ಪ್ರಸ್ತುತ ದಿನಗಳಲ್ಲಿ ಮಾದಕ ವಸ್ತುಗಳು ವಿದ್ಯಾರ್ಥಿಗಳನ್ನು ಕಾಡುತ್ತಿರುವ ಬಹುದೊಡ್ಡ ಸಮಸ್ಯೆಯಾಗಿದ್ದು, ಯುವ ಸಮಾಜ ಇದರ ಬಗ್ಗೆ ಜಾಗೃತರಾಗಬೇಕು. ಸಾಮಾಜಿಕ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕು ಎಂದರು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ ಸಾಮಾಜಿಕ ಬದ್ಧತೆ ಹೆಚ್ಚಾಗುತ್ತದೆ. ಸಮಾಜದಲ್ಲಿ ನಡೆಯುವ ವಿವಿಧ ಚಟುವಟಿಕೆ ಮತ್ತು ಸಮಾಜಕ್ಕೆ ಸ್ಪಂದಿಸುವ ರೀತಿಯ ಅರಿವಾಗುತ್ತದೆ. ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕು. ಮತದಾನದ ಮಹತ್ವವನ್ನು ಅರಿಯಬೇಕು, ತಮ್ಮ ತಮ್ಮ ಜವಾಬ್ದಾರಿಯನ್ನು ಅರಿತಾಗ ಮಾತ್ರ ದುಶ್ವಟಗಳಿಂದ ದೂರವಿರಲು ಸಾಧ್ಯವೆಂದು ಅಭಿಪ್ರಯಾಪಟ್ಟರು. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಸಲ್ಲದು ಎಂದ ಡಾ.ಬಿ.ಸಿ.ನವೀನ್ ಕುಮಾರ್, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಿಕ್ಷಣ ಕ್ಷೇತ್ರವನ್ನು ಪ್ರಗತಿಯತ್ತ ಕೊಂಡೊಯ್ಯಬೇಕು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಪ್ರೋತ್ಸಾಹ ನೀಡಬೇಕು ಮತ್ತು ಸ್ಪರ್ಧಾತ್ಮಕ ಪ್ರಗತಿಗೆ ಕಾರ್ಯಾಗಾರಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡಬೇಕು ಎಂದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣವಂತರಾಗಬೇಕು, ದೇಶದ ಪ್ರಗತಿಗೆ ಅರ್ಥಶಾಸ್ತ್ರ, ಇತಿಹಾಸ, ಸಮಾಜಶಾಸ್ತ್ರ, ಗಣಿತ ಬಹುಮುಖ್ಯವಾಗಿದ್ದು, ವಿದ್ಯಾರ್ಥಿಗಳು ತಾವು ಓದುವ ವಿಷಯದ ಕುರಿತು ಕೀಳರಿಮೆ ಇಟ್ಟುಕೊಳ್ಳದೆ ಅಭಿಮಾನವನ್ನು ಹೊಂದಬೇಕು. ಅಂತಸ್ತು, ಅಧಿಕಾರ ಯಾವುದೂ ಶಾಶ್ವತ ಅಲ್ಲ, ಉತ್ತಮ ವ್ಯಕ್ತಿತ್ವ ಮಾತ್ರ ಶಾಶ್ವತ ಎಂದು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಒಂದು ಸಮಾಜಕ್ಕೆ ಸೀಮಿತಗೊಳಿಸಿರುವುದು ನಮ್ಮ ದೇಶದ ದುರಂತ. ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ವ್ಯಕ್ತಿತ್ವ, ಆದರ್ಶವನ್ನು ಅಳವಡಿಸಿಕೊಳ್ಳುವ ಮೂಲಕ ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಡಾ.ಬಿ.ಸಿ.ನವೀನ್ ಕುಮಾರ್ ಕರೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಜ್ಞಾನಕ್ಕಿಂತ ಸಂಪತ್ತು ಮತ್ತೊಂದಿಲ್ಲ, ಅಜ್ಞಾನವನ್ನು ಜ್ಞಾನವಾಗಿ ಪರಿವರ್ತಿಸಿ ಸಂಪತ್ತನ್ನು ಗಳಿಸುವಂತಾಗಬೇಕು, ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಿಕ್ಷಣ ಮುಗಿದ ನಂತರವು ಓದುವುದನ್ನು ಹವ್ಯಾಸವನ್ನಾಗಿ ಪರಿವರ್ತಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ನಿರಂತರ ಅಭ್ಯಾಸ ಮಾಡಿ ಜವಾಬ್ದಾರಿಯುತ ನಾಯಕರಾಗಿ ವೃತ್ತಿಯಲ್ಲಿ ತೊಡಗಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಯುವಕ, ಯುವತಿಯರಿಗೆ ಸಮಾನ ಅವಕಾಶ ದೊರೆಯಲು ಸಂವಿಧಾನ ಮುಖ್ಯ ಕಾರಣ, ಜವಾಬ್ದಾರಿಯುತ ನಾಗರಿಕರಾಗಿ ಕೆಲಸ ಮಾಡಬೇಕು, ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ನಮಗೆ ಸಂತೋಷ ನೀಡುವ ವೃತ್ತಿಯನ್ನು ಆಯ್ಕೆ ಮಾಡಿಕೊಂಡಲ್ಲಿ ಮಾತ್ರ ಸಮಾಜದಲ್ಲಿ ಅರ್ಥಪೂರ್ಣ ಬದುಕು ಸಾಗಿಸಲು ಸಾಧ್ಯ ಎಂದರು. ದಲಿತ ಸಂಘರ್ಷ ಸಮಿತಿ ಅತ್ಯುತ್ತಮ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜಿಲ್ಲೆಯಾದ್ಯಂತ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಶೈಕ್ಷಣಿಕ ಅಭಿವೃದ್ಧಿಗೆ ಪ್ರೋತ್ಸಾಹಿಸುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಂದೆ ತರಬೇಕು ಎಂಬುವುದನ್ನು ಸವಾಲಾಗಿ ಸ್ವೀಕರಿಸಿ, ಸಂಪನ್ಮೂಲ ಕ್ರೋಢೀಕರಣದ ಕಷ್ಟದ ನಡುವೆಯೂ ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ದೇಶಕ್ಕೆ ಜವಾಬ್ದಾರಿಯುತ ಯುವ ಸಮೂಹವನ್ನು ಕೊಡುಗೆಯಾಗಿ ನೀಡುವುದರಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರಿ ಶಾಲೆ ಎಂಬ ಕೀಳರಿಮೆಯನ್ನು ಬಿಟ್ಟು ನಿರಂತರ ಕಲಿಕೆಯಿಂದ ಸಮಾಜದ ಉನ್ನತ ಪ್ರಜೆಯಾಗಬೇಕು ಮತ್ತು ಮುಂಬರುವ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು. ಕಳೆದ ಅನೇಕ ವರ್ಷಗಳಿಂದ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಉಪನ್ಯಾಸಕರನ್ನು ಸನ್ಮಾನಿಸಿಕೊಂಡು ಬರಲಾಗುತ್ತಿದೆ. ಕಾರ್ಯಕ್ರಮದ ಫಲವಾಗಿ ವರ್ಷದಿಂದ ವರ್ಷಕ್ಕೆ ಉತ್ತಮ ಫಲಿತಾಂಶ ದೊರೆಯುತ್ತಿದೆ. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡಲಿದ್ದೇವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಬಾರ ಪ್ರಾಂಶುಪಾಲ ವೆಂಕಟೇಶ್ ಪ್ರಸನ್ನ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಗೌತಮ ಬುದ್ಧರ ಆಶಯಗಳನ್ನು ಮುಂದಿಟ್ಟುಕೊಂಡು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ದಲಿತ ಸಂಘರ್ಷ ಸಮಿತಿ ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಮತ್ತಷ್ಟು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದರು.
ಬಿಇಒ ಕೃಷ್ಣಪ್ಪ, ದಸಂ ಸಮಿತಿಯ ಕೊಡಗು-ಮೈಸೂರು ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಹಾಗೂ ಸಂಚಾಲಕಿ ಪ್ರೇಮ ಕೃಷ್ಣಪ್ಪ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಡಾ.ಮೋಹನ್ ಕುಮಾರ್ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ 21 ಉಪನ್ಯಾಸಕರು ಹಾಗೂ ಹೆಚ್ಚು ಅಂಕ ಪಡೆದ 9 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರು ಹಾಗೂ ಉಪನ್ಯಾಸಕರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.