

ಕುಶಾಲನಗರ NEWS DESK ಮಾ.18 : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸತ್ಯಕ್ಕೆ ದೂರವಾದ ಆರೋಪಗಳ ಮೂಲಕ ಕೆಲವು ವ್ಯಕ್ತಿಗಳು ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆಯನ್ನು ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಿದ್ದಾರೆ. ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ನ ಕೊಡಗು ಜಿಲ್ಲಾ ಅಧ್ಯಕ್ಷ ಅಭಿಮನ್ಯು ಕುಮಾರ್, ಉಪಾಧ್ಯಕ್ಷ ರಂಗಸ್ವಾಮಿ ಮತ್ತಿತರರು ಹಾಜರಿದ್ದರು.