


ನಾಪೋಕ್ಲು ಮಾ.21 NEWS DESK : ಏಡ್ಸ್ ತಡೆಗಟ್ಟುವಲ್ಲಿ ಯುವ ಜನತೆಯ ಪಾತ್ರ ಪ್ರಮುಖ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿ ನಿರ್ಮಲ ಹೇಳಿದರು. ನಾಪೋಕ್ಲುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೆಚ್‍ಐವಿ ಏಡ್ಸ್ ನಿಯಂತ್ರಣ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಏಡ್ಸ್ ಹರಡುವ ವಿಧಾನ, ಏಡ್ಸ್ ರೋಗದ ಲಕ್ಷಣಗಳು, ಅದರಿಂದ ಆಗುವ ಸಮಸ್ಯೆಗಳು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಹೊಂದಿರಬೇಕು ಎಂದರು. ಏಡ್ಸ್ ಜಾಗೃತಿ ಮತ್ತು ನಿಯಂತ್ರಣದ ಕುರಿತು ರಸಪ್ರಶ್ನೆ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮನೋಜ್ ಕುಮಾರ್ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಎಸ್.ಆಶಾ, ಬೋಧಕ, ಬೋಧಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಶೇಷ ಉಪನ್ಯಾಸ ನೀಡಿದ ಆಪ್ತ ಸಮಾಲೋಚಕಿ ನಿರ್ಮಲ ಅವರಿಗೆ ಕಾಲೇಜಿನ ವತಿಯಿಂದ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ವರದಿ : ದುಗ್ಗಳ ಸದಾನಂದ.