


ಮಡಿಕೇರಿ ಮಾ.25 NEWS DESK : ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಮಿತಿ ನೂತನ ಸದಸ್ಯರಾದ ಜೆ.ಎಲ್.ಜನಾರ್ಧನ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾಸಿಸುವ ಪ್ರದೇಶದಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸುವಂತಾಗಬೇಕು. ಪಡಿತರ ಚೀಟಿಯನ್ನು ಆದ್ಯತೆ ಮೇಲೆ ವಿತರಿಸುವಂತಾಗಬೇಕು ಎಂದು ಕೋರಿದರು. ಪರಿಶಿಷ್ಟರ ಕಾಲೋನಿಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ವಸತಿ ಸೌಲಭ್ಯ ಹೀಗೆ ಹಲವು ಮೂಲ ಸೌಲಭ್ಯ ಒದಗಿಸಬೇಕು. ಜೊತೆಗೆ ಹಕ್ಕುಪತ್ರವನ್ನು ವಿತರಿಸುವಂತಾಗಬೇಕು ಎಂದು ಮನವಿ ಮಾಡಿದರು. ಮತ್ತೊಬ್ಬ ಸದಸ್ಯರಾದ ಜಾಯ್ಸ್ ಮೆನೇಜಸ್ ಅವರು ಮಾತನಾಡಿ ಮಹಿಳಾ ಎಸ್‍ಸಿಎಸ್‍ಟಿ ಗುಂಪುಗಳನ್ನು ಆರ್ಥಿಕವಾಗಿ ಬಲಪಡಿಸಲು ಮುಂದಾಗಬೇಕು. ಬಾಳೆಗುಂಡಿ, ಬಜೆಗುಂಡಿ, ವಾಲ್ನೂರು ಮತ್ತಿತರ ಕಾಲೋನಿಗಳಲ್ಲಿ ವಾಸಿಸುವ ಪರಿಶಿಷ್ಟ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ನೀಡುವಂತಾಗಬೇಕು ಎಂದು ಕೋರಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮಾಜದವರಿಗೆ ಇರುವ ಸೌಲಭ್ಯಗಳ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು. ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಅಧಿಕಾರಿಗಳ ಜೊತೆ ಕೈಜೋಡಿಸಬೇಕು. ಕಾನೂನು ಪ್ರಕಾರ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು ಎಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಮಾತನಾಡಿ, ಸೋಮವಾರಪೇಟೆ ತಾಲ್ಲೂಕಿನ ಊರುಡುವೆ ಜಾಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳು ವಾಸಿಸುತ್ತಿದ್ದು, ಈ ಜಾಗಕ್ಕೆ ಹಕ್ಕುಪತ್ರ ವಿತರಿಸುವ ಬಗ್ಗೆ ಕಳೆದ ಬಾರಿ ಚರ್ಚಿಸಲಾಗಿತ್ತು, ಅದರಂತೆ ಕ್ರಮಕೈಗೊಳ್ಳಲಾಗಿದೆ ಎಂದರು. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು 2005 ರೊಳಗೆ ವಾಸಿಸುತ್ತಿರುವವರ ಬಗ್ಗೆ ದಾಖಲೆಗಳನ್ನು ನೀಡಬೇಕು. ಊರುಡುವೆ ಜಾಗವು ಅರಣ್ಯ ವ್ಯಾಪ್ತಿಯ ಪ್ರದೇಶದಲ್ಲಿ ಬರಲಿದ್ದು, ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. ಮಾದಾಪುರ ರಸ್ತೆಯು ಹಿರಿಸೇವೆ- ಚೆಟ್ಟಳ್ಳಿ ರಾಜ್ಯ ಹೆದ್ದಾರಿಯಾಗಿದ್ದು, ಪ್ರಸಕ್ತ ವಾರ್ಷಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದ್ದು, ಗುಂಡಿ ಮುಚ್ಚಿ ಸಂಚಾರಕ್ಕೆ ಅನುವು ಮಾಡಲಾಗಿದೆ ಎಂದು ಶೇಖರ್ ಅವರು ತಿಳಿಸಿದರು. ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಬಳಿಕ ನಡೆದ ಸಫಾಯಿ ಕರ್ಮಚಾರಿಗಳ/ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್‍ಗಳ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ರಂಗಸ್ವಾಮಿ ಅವರು ಪೌರಕಾರ್ಮಿಕರಿಗೆ ವಿವಿಧ ಅಭಿವೃದ್ಧಿ ನಿಗಮದಲ್ಲಿ ನೇರ ಸಾಲ ಯೋಜನೆ ಒದಗಿಸುವಂತಾಗಬೇಕು ಎಂದು ಕೋರಿದರು. ಗೋಣಿಕೊಪ್ಪದಲ್ಲಿ ಎರಡು ಪೌರಕಾರ್ಮಿಕ ಕುಟುಂಬಗಳು ವಾಸ ಮಾಡುತ್ತಿದ್ದು, ಈ ಪ್ರದೇಶದಲ್ಲಿ ಸ್ವಚ್ಛತೆ ಇಲ್ಲದೆ ತುಂಬಾ ಗಂಭೀರ ಸಮಸ್ಯೆಯಾಗಿದೆ. ಈ ಬಗ್ಗೆ ಗ್ರಾ.ಪಂ.ಪಿಡಿಒ ಅವರು ಬಗೆಹರಿಸಬೇಕು ಎಂದರು. ಸಿದ್ದಾಪುರದಲ್ಲಿ ಪೌರಕಾರ್ಮಿಕರಿಗೆ ಹಲವು ಸೌಲಭ್ಯ ಕಲ್ಪಿಸಬೇಕು. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಕೋರಿದರು. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ತಾ.ಪಂ.ಇಒ ಮತ್ತು ಸಮಿತಿ ಸದಸ್ಯರು ಸಿದ್ದಾಪುರಕ್ಕೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಬಗೆ ಹರಿಸುವಂತೆ ಸೂಚಿಸಿದರು. ಖಾಸಗಿ ಜಾಗದಲ್ಲಿ ವಾಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಹಕ್ಕುಪತ್ರ ನೀಡುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ರಂಗಸ್ವಾಮಿ ಅವರು ಕೋರಿದರು. ಹಾಗೆಯೇ ಸುಂಟಿಕೊಪ್ಪದಲ್ಲಿ ಬಸ್ ನಿಲ್ದಾಣದ ಬಳಿ ಬಸ್ ನಿಲುಗಡೆ ಮಾಡಬೇಕು. ಖಾಸಗಿ ಜಾಗಕ್ಕೆ ಹಕ್ಕುಪತ್ರ ನೀಡಲು ಬರುವುದಿಲ್ಲ. ಸಂಬಂಧಪಟ್ಟವರಿಗೆ ಮನವಿ ಮಾಡುವಂತಾಗಬೇಕು ಎಂದು ಸಲಹೆ ಮಾಡಿದರು. ಗ್ರಾ.ಪಂ.ವಾರು ನಿವೇಶನ ರಹಿತರ ಪಟ್ಟಿಗೆ ಪೌರಕಾರ್ಮಿಕರನ್ನು ಸೇರಿಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಶೇಖರ್ ಸಲಹೆ ಮಾಡಿದರು. ನಗರಾಭಿವೃದ್ಧಿ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ತಾ.ಪಂ.ಇಒ ಅಪ್ಪಣ್ಣ, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳಾದ ನಾಚಪ್ಪ, ಕೃಷ್ಣಪ್ರಸಾದ್, ಸತೀಶ್, ಇತರರು ಇದ್ದರು. ಶೇ.95 ರಷ್ಟು ಪ್ರಗತಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅನುಷ್ಠಾನಗೊಂಡಿರುವ ಕಾರ್ಯಕ್ರಮಗಳ ಸಂಬಂಧ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪ್ರಸಕ್ತ ವರ್ಷದಲ್ಲಿ ಶೇ.95 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮಾರ್ಚ್, 29 ರವರೆಗೆ ಶೇ.100 ರಷ್ಟು ಪ್ರಗತಿ ಸಾಧಿಸಿ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ವೈಯಕ್ತಿಕ ಹಾಗೂ ಸಮುದಾಯ ಸೌಲಭ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.