


ಕುಶಾಲನಗರ ಮಾ.25 NEWS DESK : ಮಾದಕವಸ್ತುಗಳು ಯುವಜನರಿಗೆ ಮಾರಕವಾಗಿ ಪರಿಣಮಿಸಿದ್ದು, ದುಶ್ಚಟದಿಂದ ದೂರವಾದರೆ ಮಾತ್ರ ಸದೃಢ ಸಮಾಜ ನಿರ್ಮಿಸಲು ಸಾಧ್ಯ ಎಂದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ( ಎ.ಎಸ್.ಐ.) ಎನ್.ಕುಮಾರಿ ಹೇಳಿದರು. ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್ ) ಯ ವತಿಯಿಂದ ತಾಲ್ಲೂಕಿನ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಸಾಲಿನ ಎನ್‍ಎಸ್‍ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕಾನೂನು ಅರಿವು ಕುರಿತು ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ನೀಡಿದರು. ಮಾದಕವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮಗಳಾಗುತ್ತವೆ . ಈ ಬಗ್ಗೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸಮಾಜದ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿರುತ್ತದೆ. ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಪಣ ತೊಡಬೇಕು ಎಂದು ಕುಮಾರಿ ಹೇಳಿದರು. ಪ್ರತಿಯೊಬ್ಬರೂ ಕಾನೂನು ಪರಿಪಾಲಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬೇಕು. ಹಾಗೆಯೇ, ಸಾಮಾಜಿಕ ಮಾಧ್ಯಮ ಹಾಗೂ ಜಾಲತಾಣಗಳ ಬಳಕೆ ಬಗ್ಗೆ ಎಚ್ಚರಿಕೆ ವಹಿಸುವುದು ಬಹಳ ಅಗತ್ಯ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಎಸ್.ಸುನಿಲ್ ಕುಮಾರ್ ಮಾತನಾಡಿ, ಯುವಶಕ್ತಿ ಈ ದೇಶದ ಬಹು ದೊಡ್ಡ ಆಸ್ತಿ. ಆ ಅಸ್ತಿಯನ್ನು ಜೋಪಾನದಿಂದ ಕಾಪಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಯುವಕರು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಎನ್‍ಎಸ್‍ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ತಮ್ಮನ್ನು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತಮ ವೇದಿಕೆ ಒದಗಿಸುತ್ತವೆ ಎಂದರು. ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ಡಾ ಬಿ.ಕೆ. ಕುಮಾರ್ ಎನ್ನೆಸ್ಸೆಸ್ ಧ್ಯೇಯೋದ್ದೇಶಗಳನ್ನು ತಿಳಿಸಿದರು. ಪೊಲೀಸ್ ಪೇದೆ ಹರ್ಷಿತಾ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎಂದರು. ಕಾಲೇಜಿನ ಉಪನ್ಯಾಸಕರಾದ ಡಾ ಟಿ.ಎಂ.ಸುಧಾಕರ್, ಡಾ.ಸಿದ್ಧಪ್ಪಾಜಿ ಎನ್., ನಟರಾಜು, ಮನೋಜ್ ಕುಮಾರ್, ಎಸ್.ಆರ್.ಚರಣರಾಜ್, ಆರಕ್ಷಕರಾದ ಬಿ.ಒ.ಸುನಿಲ್, ಶಿಲ್ಪ, ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಇದ್ದರು.