



ಮಡಿಕೇರಿ ಮಾ.25 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮಹಾವಿದ್ಯಾಲಯದ ಅಮೃತ ಮಹೋತ್ಸವದ ಅಂಗವಾಗಿ ಕೊಡಗು ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ವಿನೂತನ 5ನೇ ಸಮ್ಮೇಳನವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವರನ್ನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೂಗುಚ್ಛ ನೀಡುವ ಮೂಲಕ ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಶಾಸಕರು, ನಾಡಿನ ಹಾಗೂ ದೇಶದ ಪ್ರಗತಿಗೆ ವಿಶ್ವವಿದ್ಯಾಲಯಗಳು ನೀಡುವ ಕೊಡುಗೆ ಅಪಾರ ಎಂದು ಬಣ್ಣಿಸಿದರು. ವಿಶ್ವವಿದ್ಯಾಲಯಗಳು ಇಂದಿನ ಪರಿಸ್ಥಿತಿಗೆ ಹಾಗೂ ಜಾಗತಿಕ ಬೇಡಿಕೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುವುದರೊಂದಿಗೆ, ಸಮೃದ್ಧ ಸಮಾಜ ನಿರ್ಮಾಣಕ್ಕೆ ನೀಡುವ ಕೊಡುಗೆ ಬಗ್ಗೆ ಸದಾ ಗಮನಹರಿಸಬೇಕು ಎಂದು ಹೇಳಿದರು. ಕರ್ನಾಟಕ ಸರಕಾರವು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿಶೇಷ ಕಾಳಜಿ ಹೊಂದಿದ್ದು, ವಿದ್ಯಾರ್ಜನೆಗೆ ಬೇಕಾಗುವ ಎಲ್ಲಾ ಸವಲತ್ತುಗಳನ್ನು ನೀಡಲು ಸದಾ ಸಿದ್ದರಿರುವುದಾಗಿ ಇದೇ ಸಂದರ್ಭದಲ್ಲಿ ಹೇಳಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ರಾಘವ ಹಾಗೂ ಹಾವೇರಿ, ಹಾಸನ, ಚಾಮರಾಜನಗರ, ಬಾಗಲಕೋಟೆ, ಕೊಪ್ಪಳ, ಬೀದರ್ ವಿಶ್ವವಿದ್ಯಾಲಯದ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ಇತರರು ಇದ್ದರು.