



ಮಡಿಕೇರಿ ಮಾ.25 NEWS DESK : ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ ರೂ.10 ಸಾವಿರ ಗೌರವಧನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಆಶಾಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ರಾಜ್ಯ ಉಪಾಧ್ಯಕ್ಷೆ ಉಮಾದೇವಿ ಮಾತನಾಡಿ, ರೂ.15,000 ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ಬೆಂಗಳೂರಿನ ಫ್ರಿಡಂ ಪಾರ್ಕ್‍ನಲ್ಲಿ ನಡೆಸಿದ ಹೋರಾಟದಲ್ಲಿ ರಾಜ್ಯದ 40,000 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಜನವರಿ 10 ರಂದು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಯ ಉನ್ನತ ಅಧಿಕಾರಿಗಳು, ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆಯಂತೆ ಏಪ್ರಿಲ್ 2025ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ರೂ.10 ಸಾವಿರ ಗೌರವಧನವನ್ನು ನೀಡಬೇಕು, ಕಾಂಪೋನೆಂಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಬೇಕು, ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತರಿಗೂ ಬಜೆಟ್‍ನಲ್ಲಿ ಘೋಷಿಸಿರುವ ರೂ.1 ಸಾವಿರ ಗೌರವಧನ ನೀಡಬೇಕೆಂದು ಒತ್ತಾಯಿಸಿದರು. ಸಮಿತಿಯ ಜಿಲ್ಲಾ ಉಪಾಧ್ಯಕ್ಷೆ ಶಾಂತಿ, ಕಾರ್ಯದರ್ಶಿ ನಾಗಮಣಿ ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕು ಆಶಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.