




ಮಡಿಕೇರಿ ಮಾ.28 NEWS DESK : ಕರ್ನಾಟಕ ರಾಜ್ಯ ಸರ್ಕಾರ, ಕೊಡಗು ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣ ಕೈಗಾರಿಕಾ ವಿಭಾಗ ವತಿಯಿಂದ 2024-25ನೇ ಸಾಲಿಗೆ ಮಂಜೂರಾದ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ವಿವಿಧ ವಿದ್ಯುತ್ ಚಾಲಿತ ಉಪಕರಣಗಳನ್ನು ವಿತರಿಸಲಾಯಿತು. ಮುಖ್ಯಮಂತ್ರಿಗಳಿಗೆ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿರಾಜಪೇಟೆಯ ತಮ್ಮ ಗೃಹ ಕಚೇರಿಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಸಲಕರಣೆ ವಿತರಿಸಿ, ಮಾತನಾಡಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವರ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗ್ರಾಮೀಣ ಜನತೆ ಇದರ ಸದುಪಯೋಗ ಪಡಿಸಿಕೊಳ್ಳುವುದರೊಂದಿಗೆ ತಮ್ಮ ಜೀವನ ಮಟ್ಟ ಏರಿಸಿಕೊಳ್ಳುವುದು ಹಾಗೂ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಲ್ಲಿ ಮುಂದೆ ಬರಬೇಕೆಂದು ಕರೆ ನೀಡಿದರು. ಕರ್ನಾಟಕ ಕಾಂಗ್ರೆಸ್ ಸರಕಾರದ ಇಂತಹ ಕಾರ್ಯಕ್ರಮಗಳು ಪ್ರಾಚೀನ ಕಾಲದ ಕಲೆಯನ್ನು ಪೋಷಿಸುವುದರೊಂದಿಗೆ ಗ್ರಾಮೀಣ ಭಾಗದ ಜನತೆಗೆ ಮುನ್ನಡೆಗೆ ಬರಲು ತುಂಬಾ ಸಹಕಾರಿಯಾಗಲಿದೆ. ಗ್ರಾಮೀಣ ಕುಶಲಕರ್ಮಿಗಳು ತಮ್ಮ ತಲಾತಲಾಂತರದಿಂದ ಬಂದಂತಹ ಕೆಲಸ ಕಾರ್ಯಗಳನ್ನು ಮುಂದುವರೆಸುತ್ತಾ ಗ್ರಾಮೀಣ ಭಾರತದ ಏಳಿಗೆಗೆ ಶ್ರಮಿಸುವಂತೆ ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಮತ್ತಷ್ಟು ಸೌಲಭ್ಯಗಳನ್ನು ಒದಗಿಸಲು ತಾವು ಸರ್ಕಾರದೊಂದಿಗೆ ಮಾತನಾಡುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಹಾಜರಿದ್ದರು.