



ಮಡಿಕೇರಿ ಏ.3 : ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಬೇಕು ಮತ್ತು ಇದರ ಪ್ರಗತಿಗೆ ಅಗತ್ಯವಿರುವ ಅನುಕೂಲವನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ಉನ್ನತ ಶಿಕ್ಷಣ ಸಚಿವ ಸುಧಾಕರ ಅವರಿಗೆ ಮನವಿ ಸಲ್ಲಿಸಿದೆ. ಈ ಕುರಿತು ಮಾಹಿತಿ ನೀಡಿರುವ ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು, ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುವುದಲ್ಲದೆ ಜಿಲ್ಲೆಯ ಆರ್ಥಿಕ ಪ್ರಗತಿಗೂ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲೆ ಬೆಟ್ಟಗುಡ್ಡಗಳಿಂದ ಕೂಡಿದ ಪ್ರದೇಶವಾಗಿದ್ದು, ಅನೇಕ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿನ ಹಿನ್ನಡೆಯಿಂದ ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಹೊರ ಜಿಲ್ಲೆಗಳನ್ನೇ ಅವಲಂಬಿಸಬೇಕಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಮಂದಿ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಾಲ ಮಾಡಿ, ಆಸ್ತಿ ಮತ್ತು ಚಿನ್ನಾಭರಣಗಳನ್ನು ಅಡವಿಟ್ಟು ಹಣ ಹೊಂದಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುತ್ತಿದೆ. ದಕ್ಷಿಣ ಕೊಡಗು ಭಾಗದಲ್ಲಿ ಶಿಕ್ಷಣದ ವಿಚಾರದಲ್ಲಿ ಪೋಷಕರು ಹೆಚ್ಚು ಕಷ್ಟ ಪಡುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲೇ ವಿಶ್ವ ವಿದ್ಯಾನಿಲಯ ಸ್ಥಾಪನೆಯಾಗಿರುವುದರಿಂದ ಸಾವಿರಾರು ಬಡ ವಿದ್ಯಾರ್ಥಿಗಳು ಇದರ ಲಾಭ ಪಡೆಯುತ್ತಿದ್ದರು. ಸಂಶೋಧನೆಗೆ ಅವಕಾಶವಿದೆ, ಉದ್ಯೋಗ ಸೃಷ್ಟಿಯಾಗಿದೆ, ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಇದು ಪೂರಕವಾಗಿದೆ. ಆದ್ದರಿಂದ ಕೊಡಗು ವಿವಿಯನ್ನು ಕೊಡಗು ಜಿಲ್ಲೆಯಲ್ಲೇ ಉಳಿಸಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದರು. ಪುಟ್ಟ ಜಿಲ್ಲೆ ಕೊಡಗು ಈ ರಾಜ್ಯದ ಪ್ರಗತಿಗಾಗಿ ನೀಡುತ್ತಿರುವ ದೊಡ್ಡ ಕೊಡುಗೆಗಳನ್ನು ಸರ್ಕಾರ ಪರಿಗಣಿಸಬೇಕು. ಕೊಡಗು ವಿವಿಯನ್ನು ಉಳಿಸುವ ಕುರಿತು ಗಂಭೀರ ಚಿಂತನೆ ಮಾಡಬೇಕು ಎಂದು ಹೇಳಿದರು.