




ಮಡಿಕೇರಿ NEWS DESK ಏ.6 : ಬಿಜೆಪಿ ಕಾರ್ಯಕರ್ತ ವಿನಯ್ ಅವರ ಆತ್ಮಹತ್ಯೆ ವಿಚಾರದಲ್ಲಿ ವಿನಾಕಾರಣ ಜಿಲ್ಲೆಯ ಇಬ್ಬರು ಶಾಸಕರನ್ನು ತೇಜೋವಧೆ ಮಾಡುತ್ತಿರುವ ಬಿಜೆಪಿ ಪ್ರಮುಖರ ನಡೆ ಖಂಡನೀಯ ಎಂದು ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿನಯ್ ಆತ್ಮಹತ್ಯೆಯಿಂದ ಎಲ್ಲರ ಮನಸ್ಸಿಗೆ ನೋವಾಗಿದೆ, ಘಟನೆಯನ್ನು ಮಾನವೀಯ ದೃಷ್ಟಿಕೋನದಲ್ಲಿ ನೋಡಬೇಕೆ ಹೊರತು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು. ಈ ಪ್ರಕರಣಕ್ಕೂ ಇಬ್ಬರು ಶಾಸಕರಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಹುರುಳಿಲ್ಲದ ಆರೋಪಗಳನ್ನು ಮಾಡುವ ಮೂಲಕ ಬಿಜೆಪಿ ತನ್ನ ಕ್ಷುಲ್ಲಕ ರಾಜಕಾರಣವನ್ನು ಪ್ರದರ್ಶಿಸುತ್ತಿದೆ. ದೇಶದ ಸಂವಿಧಾನ ಮತ್ತು ಕಾನೂನಿನ ಮೇಲೆ ಗೌರವವಿಲ್ಲದ ಬಿಜೆಪಿ ಮಂದಿ ನಿಯಮ ಮೀರಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ ಅವರು ಅಧಿಕಾರಕ್ಕೆ ಬಂದ ಎರಡೇ ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಹೆಚ್ಚು ಜನಪ್ರಿಯತೆಯನ್ನು ಗಳಿಸಿಕೊಂಡಿದ್ದಾರೆ. ಜನರ ನೋವಿಗೆ ತಕ್ಷಣ ಸ್ಪಂದಿಸುವ ಇಬ್ಬರು ಶಾಸಕರ ರಾಜಕೀಯ ಬೆಳವಣಿಗೆಯನ್ನು ಸಹಿಸದ ಬಿಜೆಪಿ ಪ್ರಮುಖರು ಅಮಾಯಕ ವಿನಯ್ ಸಾವಿನ ಪ್ರಕರಣವನ್ನು ಮುಂದಿಟ್ಟುಕೊAಡು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಸೋಲಿನ ಹತಾಶೆಯಿಂದ ಹೊರ ಬರಲಾಗದ ಬಿಜೆಪಿ ಯಾವುದೇ ತಪ್ಪುಗಳನ್ನ ಮಾಡದ ಶಾಸಕರುಗಳ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದೆ. ಬಿಜೆಪಿಗೆ ಕಾನೂನಿನ ಮೇಲೆ ಗೌರವವಿದ್ದರೆ ವಿನಯ್ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಕಾದು ನೋಡಲಿ. ಅದನ್ನ ಬಿಟ್ಟು ಬೀದಿ ಹೋರಾಟದ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುವುದು ಮತ್ತು ಶಾಸಕರುಗಳ ವಿರುದ್ಧ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ಬಿ.ವೈ.ರಾಜೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕದ್ವಯರ ತೇಜೋವಧೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ ಜನರು ಕೂಡ ಸಹಿಸುವುದಿಲ್ಲ ಎನ್ನುವುದನ್ನು ಬಿಜೆಪಿ ಅರ್ಥಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ.