




ಕುಶಾಲನಗರ NEWS DESK ಏ.6 : ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಇಬ್ಬರು ಶಾಸಕರ ವಿರುದ್ಧ ತಕ್ಷಣ ಎಫ್ ಐ ಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಕುಶಾಲನಗರ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವಿನಯ್ ಸೋಮಯ್ಯ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿನಯ್ ಸೋಮಯ್ಯ ಅವರು ಆತ್ಮಹತ್ಯೆಗೆ ಮುನ್ನ ಬರೆದ ಡೆತ್ ನೋಟ್ ನಲ್ಲಿ ಕೆಲವರ ಹೆಸರನ್ನು ಉಲ್ಲೇಖಿಸಿದ್ದು, ಕುಟುಂಬಸ್ಥರು ದೂರು ನೀಡಿದರೂ ಪೊಲೀಸರು ಸಮರ್ಪಕವಾಗಿ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿ ಕೆಲಸ ನಿರ್ವಹಿಸುತ್ತಿರುವುದು ಇತ್ತೀಚಿನ ಬೆಳವಣಿಗೆಯಾಗಿದೆ. ವಿರೋಧ ಪಕ್ಷಗಳ ಕಾರ್ಯಕರ್ತರ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದ್ದು, ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳಿಗೆ ಲಿಖಿತ ದೂರ ನೀಡಲಾಗಿದೆ ಎಂದು ವಿಜಯೇಂದ್ರ ತಿಳಿಸಿದರು. ವಿನಯ್ ಪ್ರಕರಣದ ದೂರಿನಲ್ಲಿ ನೀಡಿರುವಂತೆ ಇಬ್ಬರು ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಿಸದಿದ್ದಲ್ಲಿ ಹೋರಾಟ ಮುಂದುವರಿಯಲಿದೆ ಎಂದರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಕೊಡಗು- ಮೈಸೂರು ಲೋಕಸಭಾ ಸದಸ್ಯ ಯದುವೀರ ಒಡೆಯರ್ ಅವರು ಮಾತನಾಡಿ ಬಿಜೆಪಿ ಕಾರ್ಯಕರ್ತನ ಸಾವಿಗೆ ನೇರವಾಗಿ ಹೊಣೆಯಾಗಿರುವವರ ವಿರುದ್ಧ ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ ಕೊಡಗಿನ ಇಬ್ಬರು ಶಾಸಕರ ವಿರುದ್ಧ ವಾಗ್ಧಾಳಿ ನಡೆಸಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮೈಸೂರು ಶಾಸಕ ಶ್ರೀ ವತ್ಸ, ರವಿಕುಮಾರ್, ಹಾಸನ ಶಾಸಕ ಪ್ರೀತಮ್ ಗೌಡ, ಮೈಸೂರು ಮೇಯರ್ ಶಿವರಾಜ್, ಬಿಜೆಪಿಯ ಮಡಿಕೇರಿ ವಿರಾಜಪೇಟೆ ಸೋಮವಾರಪೇಟೆ, ವಿರಾಜಪೇಟೆ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜಿಲ್ಲೆಯ ಇಬ್ಬರು ಶಾಸಕರುಗಳ ಮೇಲೆ ತಕ್ಷಣ ಎಫ್ ಐ ಆರ್ ದಾಖಲಿಸುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕುಶಾಲನಗರ ಡಿವೈಎಸ್ಪಿ ಕಚೇರಿಗೆ ಮತ್ತಿಗೆ ಹಾಕಲು ಪ್ರಯತ್ನಿಸಿದರು. ಈ ಸಂದರ್ಭ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆಗೊಳಿಸಿತು.