




ಮಡಿಕೇರಿ ಏ.6 NEWS DESK : ಕೊಡಗಿನ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಬೆಳವಣಿಗೆಯನ್ನು ಸಹಿಸದ ಬಿಜೆಪಿ ಪ್ರಮುಖರು ರಾಜಕೀಯ ಮತ್ಸರದಿಂದ ವಿನಯ್ ಸೋಮಯ್ಯ ಅವರ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಭಿವೃದ್ಧಿಪರ ಚಿಂತನೆ ಮತ್ತು ಜನರ ಸಮಸ್ಯೆಗಳಿಗೆ ಸ್ಪಂದನೆ ಈ ಆದರ್ಶಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಇಬ್ಬರು ಶಾಸಕರು ರಾಜಕೀಯ ವಲಯದಲ್ಲಿ ಹೆಮ್ಮರವಾಗಿ ಬೆಳೆಯುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿ ಮಂದಿ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳಿಂದಲೇ ಜನಪ್ರಿಯತೆ ಗಳಿಸಿರುವ ಇಬ್ಬರು ಸಜ್ಜನ ಶಾಸಕರನ್ನು ಮಣಿಸಲು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಸಾಧ್ಯವಿಲ್ಲ. ಸಮಾಜವನ್ನು ಒಡೆದು ಆಳುವ ಬಿಜೆಪಿಯ ಸಣ್ಣತನವನ್ನು ಜನರು ಈಗಾಗಲೇ ಅರಿತುಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕುರಿತು ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರ ಬೀಳುವ ಮೊದಲೇ ಜಿಲ್ಲೆಯ ಇಬ್ಬರು ಶಾಸಕರುಗಳ ವಿರುದ್ಧ ಬಿಜೆಪಿ ಪ್ರಮುಖರು ಸುಳ್ಳು ಆರೋಪಗಳನ್ನು ಮಾಡಿ ತೇಜೋವಧೆ ಮಾಡುತ್ತಿರುವುದು ಖಂಡನೀಯ. ಕಾನೂನಿಗೆ ಗೌರವ ನೀಡದೆ ಶಾಸಕರುಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಅವಹೇಳನ ಮಾಡುವುದನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ರಾಜಕೀಯ ಮತ್ಸರಕ್ಕಾಗಿ ಶಾಸಕದ್ವಯರ ವಿರುದ್ಧ ಸುಳ್ಳು ಆರೋಪ ಮತ್ತು ತೇಜೋವಧೆ ಮಾಡುವುದನ್ನು ಮುಂದುವರಿಸಿದರೆ ಕಾಂಗ್ರೆಸ್ ನಿಂದ ತೀವ್ರ ರೀತಿಯ ಹೋರಾಟ ನಡೆಸಲಾಗುವುದು ಎಂದು ಎಂ.ಎನ್.ರವೂಫ್ ಎಚ್ಚರಿಕೆ ನೀಡಿದ್ದಾರೆ.