






ಸುಂಟಿಕೊಪ್ಪ ಏ.8 NEWS DESK : ಸುಂಟಿಕೊಪ್ಪ ಉಲುಗುಲಿ ಪನ್ಯ ಗ್ರಾಮದಲ್ಲಿ ನೆಲೆನಿಂತಿರುವ ಗ್ರಾಮ ದೇವತೆಯಾದ ಶ್ರೀ ಮಳೂರು ಬೆಳ್ಳಾರಿಕ್ಕಮ್ಮ ದೇವರ ವಾರ್ಷಿಕೋತ್ಸವವು 7 ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ಎತ್ತು ಪೋರಾಟ್, ಚೌರಿಕುಣಿತ, ಶ್ರೀ ದೇವರ ಉತ್ಸವ ಮೂರ್ತಿಯ ನೃತ್ಯ ಬಲಿ ಹಾಗೂ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಉತ್ಸವದ ಅಂಗವಾಗಿ ಸುಂಟಿಕೊಪ್ಪ, ಉಲುಗುಲಿ, ಆಂಜನಗೇರಿ ಬೆಟ್ಟಗೇರಿ, ಹರದೂರು ಗ್ರಾಮದ ಗ್ರಾಮಸ್ಥರು ವ್ರತದಲ್ಲಿದ್ದು, ವಾಡಿಕೆಯಂತೆ ವಾರದ ನಂತರ ದೇವಾಲಯದಲ್ಲಿ ವೃತಾಚರಣೆಯ ವಿಶೇಷ ನೆರವೇರಿಸಿದರು. ಗ್ರಾಮದ ಮಂದನ ರಮೇಶ್ ಅವರ ಮನೆಯಿಂದ ಎತ್ತಿನ ಮೇಲೆ ಇರಿಸುವ ಮೂಲಕ ವಾದ್ಯಗೋಷ್ಠಿಯೊಂದಿಗೆ ದೇವಾಲಯಕ್ಕೆ ಮೆರವಣಿಗೆಯೊಂದಿಗೆ ತಂದು ದೇವಾಲಯದಲ್ಲಿ ಭಂಡಾರವನ್ನು ಸಮರ್ಪಿಸಿ, ನಂತರ ಗ್ರಾಮದ ಜನತೆಯಿಂದ ಈಡುಗಾಯಿ ಎತ್ತು ಪೋರಾಟ್, ಚೌರಿಕುಣಿತದಲ್ಲಿ ಪುರುಷರು ಯುವಕರು ಪಾಲ್ಗೊಂಡು ನಂತರ ಬೆಳ್ಳಾರಿಕ್ಕಮ್ಮ ಉತ್ಸವ ಮೂರ್ತಿಯನ್ನು ದೇವಸ್ಥಾನಕ್ಕೆ ಪ್ರದಕ್ಷಿಣೆ ನಡೆಸಿ ದೇವಿಗೆ ಪೂಜೆ ಮಹಾಮಂಗಳಾರತಿ ಪ್ರಸಾದ ವಿತರಣೆಯನ್ನು ನಡೆಸಲಾಯಿತು. ದಿನದ ಪೂಜಾ ಕೈಂಕರ್ಯವನ್ನು ಅರ್ಚಕರಾದ ಗಣೇಶ್ ಶರ್ಮ, ಮಂಜುನಾಥ ಉಡುಪ, ವೆಂಕಟರಮಣ ಭಟ್ ನೆರವೇರಿಸಿದರು. ವಿವಿಧೆಡೆಯಿಂದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.