






ಮಡಿಕೇರಿ ಏ.10 NEWS DESK : ಇದೇ ಏಪ್ರಿಲ್, 16 ಮತ್ತು 17 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿಇಟಿ ಪರೀಕ್ಷೆ ಸಿದ್ಧತೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಇರಬೇಕು. ಪರೀಕ್ಷಾ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ, ಶೌಚಾಲಯ ಇರಬೇಕು. ಸಿಇಟಿ ಪರೀಕ್ಷೆ ಸಂಬಂಧ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ಪಷ್ಟ ನಿರ್ದೇಶನ ನೀಡಿದರು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಸುಗಮವಾಗಿ ಪರೀಕ್ಷೆ ನಡೆಸಬೇಕು. ಪೊಲೀಸರ ನಿಯೋಜನೆ, ರೂಟ್ ಅಧಿಕಾರಿಗಳು ಮತ್ತು ಮೇಲ್ವಿಚಾರಕರ ನಿಯೋಜನೆ ಮತ್ತಿತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದರು. ಪರೀಕ್ಷೆ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವೈದ್ಯರು/ ಶ್ರುಶ್ರೂಷಕರನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ಸಿಇಟಿ ಪರೀಕ್ಷಾ ದಿನಗಳಂದು ಸಮಯ ಪಾಲನೆಯಿಂದ ಅತಿಮುಖ್ಯವಾಗಿದ್ದು, ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಸಿಇಟಿ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆ.ಮಂಜುಳ ಮಾತನಾಡಿ, ಜಿಲ್ಲಾ ಕೇಂದ್ರ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪಿಯು ಕಾಲೇಜು, ಸಂತ ಜೋಸೆಫರ ಪಿಯು ಕಾಲೇಜು ಮತ್ತು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ 1767 ಮಂದಿ ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 849, ಸಂತ ಮೈಕಲರ ಪಿಯು ಕಾಲೇಜಿನಲ್ಲಿ 264, ಸಂತ ಜೋಸೆಫರ ಪಿಯು ಕಾಲೇಜಿನಲ್ಲಿ 414 ಮತ್ತು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ 240 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದರು. ಸಿಇಟಿ ಪರೀಕ್ಷೆ ಸಂಬಂಧ ನೋಡಲ್ ಅಧಿಕಾರಿಗಳು, ವಿಶೇಷ ಜಾಗೃತ ದಳ, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ಹೀಗೆ ವಿವಿಧ ಹಂತದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು. ಏಪ್ರಿಲ್, 16 ರಂದು ಬೆಳಗ್ಗೆ 10.30 ಗಂಟೆಯಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ಶಾಸ್ತ್ರ, ಏಪ್ರಿಲ್, 17 ರಂದು ಬೆಳಗ್ಗೆ 10.30 ಯಿಂದ 11.50 ರವರೆಗೆ ಗಣಿತ ಮತ್ತು ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಕೆ.ಮಂಜುಳ ಅವರು ವಿವರಿಸಿದರು. ಕಳೆದ ಬಾರಿಯಂತೆ ಈ ಬಾರಿಯೂ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು. ಪೊಲೀಸ್ ಇನ್ಸ್‍ಪೆಕ್ಟರ್ ಮೇದಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ಮದೆನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರದ ವಿಜಯ್ ಅವರು ಸಿಇಟಿ ಪರೀಕ್ಷೆ ಸಂಬಂಧ ಹಲವು ಮಾಹಿತಿ ನೀಡಿದರು. ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಡಾ.ಮಧುಸೂದನ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಪಿ.ಕವಿತ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ಪದವಿ ಪೂರ್ವ ವಿವಿಧ ಕಾಲೇಜಿನ ಪ್ರಾಂಶುಪಾಲರು ಇದ್ದರು.