ಮಡಿಕೇರಿ ಏ.21 NEWS DESK : ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಕಟ್ಟಡ ಹಾಗೂ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸುಮಾರು 5 ಕೋಟಿ ವೆಚ್ಚದ ಹೆಚ್ಚುವರಿ ಕೊಠಡಿಯ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಕಾಲೇಜ್ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸುವುದು ತಮ್ಮ ಹಾಗೂ ಸರಕಾರದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ನೂತನ ಕಟ್ಟಡ ಹಾಗೂ ಅದಕ್ಕೆ ಬೇಕಾದ ಹೆಚ್ಚುವರಿ ಕೊಠಡಿಗೆ ಅನುದಾನವನ್ನು ಒದಗಿಸಲು ತಾನು ಸಂತೋಷ ಪಡುವುದಾಗಿ ಹೇಳಿದರು. ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಗಮನ ನೀಡಿ, ತಮ್ಮ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಉತ್ತಮವಾಗಿ ವ್ಯಾಸಂಗ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಪುರಸಭೆ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.












