
ಮಡಿಕೇರಿ ಏ.22 NEWS DESK : ವನ್ಯಜೀವಿ-ಮಾನವ ಸಂಘರ್ಷ ಶಾಶ್ವತವಾಗಿ ತಡೆಗಟ್ಟುವ ಹಿನ್ನೆಲೆಯಲ್ಲಿ ಅತ್ಯಂತ ಗಂಭೀರವಾಗಿ ಕಾರ್ಯಸೂಚಿಗಳನ್ನು ರೂಪಿಸುತ್ತಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಇಂದು ಅರಣ್ಯ ಇಲಾಖೆ ವತಿಯಿಂದ ನಡೆಯುತ್ತಿರುವ ಹುಲಿ ಸೆರೆ ಕಾರ್ಯಾಚರಣೆಯ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಿದರು. ಪೊನ್ನಂಪೇಟೆ ತಾಲೂಕು ಬಿರುನಾಣಿ ಗ್ರಾಮದ, ತೆರಾಲು ಭಾಗದಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಸೆರೆ ಕಾರ್ಯಾಚರಣೆಯ ನೇತೃತ್ವ ವಹಿಸಿದ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನವನ್ನು ಬಳಸಿ ಅತ್ಯಂತ ಶೀಘ್ರದಲ್ಲಿ ಕಾರ್ಯಾಚರಣೆಯನ್ನು ಮುಗಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷ ಪ್ರಶಾಂತ್, ಬಿರುನಾಣಿ ವಲಯ ಅಧ್ಯಕ್ಷ ಪ್ರೀತಮ್, ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಸ್ಥಳೀಯರು ಉಪಸಿತರಿದ್ದರು.










