
ಮಡಿಕೇರಿ NEWS DESK ಏ.23 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸುತ್ತದೆ ಮತ್ತು ಭಯೋತ್ಪಾದಕರ ದಾಳಿಯಿಂದ ಅಸುನೀಗಿದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತದೆ ಎಂದು ಸಂಘದ ತಾಲ್ಲೂಕು ಅಧ್ಯಕ್ಷ ವಿ.ಜಿ.ಮೋಹನ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಮ್ಮು ಕಾಶ್ಮೀರದಲ್ಲಿ ಮತ್ತೆ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವ ಪಾಕ್ ಬೆಂಬಲಿತ ಭಯೋತ್ಪಾದಕರ ಹೆಡೆಮುರಿ ಕಟ್ಟಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಜಮ್ಮು ಕಾಶ್ಮೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಕೇಂದ್ರ ಸರ್ಕಾರ ಉಗ್ರರಿಗೆ ನೆರವು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಬೇಕು ಎಂದು ಆಗ್ರಹಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಉಗ್ರರು ನಡೆಸಿದ ಹೇಯ ಕೃತ್ಯವನ್ನು ಯಾರೂ ಕ್ಷಮಿಸಲು ಸಾಧ್ಯವಿಲ್ಲ. ಈ ದಾಳಿಯನ್ನು ಸರ್ಕಾರ ಮತ್ತು ದೇಶದ ಜನತೆ ಗಂಭೀರವಾಗಿ ಪರಿಗಣಿಸಬೇಕು. ಎಲ್ಲರೂ ಒಗ್ಗಟ್ಟನ್ನು ಕಾಯ್ದುಕೊಂಡು ದೇಶದ್ರೋಹಿಗಳ ವಿರುದ್ಧ ಹೋರಾಟ ನಡೆಸಬೇಕು. ದೇಶದ ರಕ್ಷಣೆಗಾಗಿ ಸರ್ಕಾರಗಳು ತೆಗೆದುಕೊಳ್ಳುವ ಕ್ರಮಗಳಿಗೆ ಬೆಂಬಲ ಸೂಚಿಸಬೇಕು ಎಂದು ವಿ.ಜಿ.ಮೋಹನ್ ತಿಳಿಸಿದ್ದಾರೆ.









