ಮಡಿಕೇರಿ NEWS DESK ಏ.24 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕರ ಸಾವಿಗೆ ಕಾರಣಕರ್ತರಾಗಿರುವ ಪಾಕಿಸ್ತಾನಿ ಬೆಂಬಲಿತ ಭಯೋತ್ಪಾದಕರನ್ನು ಸದೆಬಡಿಯಲು ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರವಾಸಿಗರನ್ನು ಹತ್ಯೆಗೈದಿರುವ ಉಗ್ರರ ಹೇಯ ಕೃತ್ಯವನ್ನು ಕಠಿಣ ಶಬ್ಧಗಳಲ್ಲಿ ಖಂಡಿಸುತ್ತೇವೆ, ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇವೆ ಎಂದು ತಿಳಿಸಿದ್ದಾರೆ. ಪ್ರಜಾಪ್ರಭುತ್ವ ರಾಷ್ಟç ಭಾರತದ ಆತ್ಮಬಲ ಕುಗ್ಗಿಸುವ ಯತ್ನಕ್ಕೆ ದೇಶದ್ರೋಹಿಗಳು ಮುಂದಾಗಿದ್ದಾರೆ. ಉಗ್ರರ ಈ ಕೃತ್ಯವನ್ನು ಭಾರತೀಯರಾದ ನಾವೆಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು. ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜಮ್ಮು ಕಾಶ್ಮೀರದಲ್ಲಿ ನಾಗರೀಕರಿಗೆ ಹಾಗೂ ಪ್ರವಾಸಿಗರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ದೇಶದ ಸುರಕ್ಷತೆಯ ದೃಷ್ಟಿಯಿಂದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಮತ್ತು ದೇಶದ್ರೋಹಿಗಳ ವಿರುದ್ಧ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳಿಗೆ ಬೆಂಬಲ ಸೂಚಿಸುವುದಾಗಿ ಎಂ.ಎನ್.ರವೂಫ್ ತಿಳಿಸಿದ್ದಾರೆ.










