




ಬೆಂಗಳೂರು ಮೇ 7 NEWS DESK : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕೈಗೊಂಡ ‘ಆಪರೇಷನ್ ಸಿಂಧೂರ್’ ಅನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ದೇಶದ ರಕ್ಷಣಾ ಪಡೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದಿದ್ದಾರೆ. ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್. ಭಾರತದ ಸೈನ್ಯ ಸಿಂಧೂರ್ ಆಪರೇಷನ್ ಮುಖಾಂತರ ಸುಮಾರು 9 ಉಗ್ರಗಾಮಿಗಳ ನೆಲೆಯನ್ನು ನಾಶಪಡಿಸಿದ್ದಾರೆ. ಭಾರತದ ನಡೆಯನ್ನು ಬೆಂಬಲಿಸುತ್ತೇನೆ. ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಉಪಸ್ಥಿತರಿದ್ದರು.