




ಮಡಿಕೇರಿ ಮೇ 10 NEWS DESK : ಪೊನ್ನಂಪೇಟೆ ತಾಲ್ಲೂಕಿನ ಟಿ ಶೆಟ್ಟಿಗೇರಿ ಗ್ರಾಮದಲ್ಲಿ ವಿವಿಧ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಟಿ.ಶೆಟ್ಟಿಗೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸುಮಾರು 40ಕ್ಕೂ ಅಧಿಕ ಮಂದಿ ಕಾರ್ಯಕರ್ತರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಶಾಲು ಹೊದಿಸಿ ಪಕ್ಷಕ್ಕೆ ಬರ ಮಾಡಿಕೊಂಡರು.
ಈ ಸಂದರ್ಭ ಮಾತನಾಡಿದ ಶಾಸಕರು, ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸುವುದರೊಂದಿಗೆ ಎಲ್ಲರೂ ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದರು. ಶತಮಾನಗಳಿಂದ ಜನಪರವಾಗಿರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಎಲ್ಲರೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ತಿತೀರ ಪ್ರಭು ಸುಬ್ಬಯ್ಯ, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಹಾಗೂ ಇತರ ಪ್ರಮುಖರು ಹಾಜರಿದ್ದರು.