





ಮಡಿಕೇರಿ NEWS DESK ಮೇ 10 : ರಾಷ್ಟ್ರೀಯ ಜನಗಣತಿ ಮತ್ತು ಜಾತಿಗಣತಿಯ ಸಂದರ್ಭ ಕೊಡವ ಬುಡಕಟ್ಟು ಜನಾಂಗಕ್ಕೆ ಪ್ರತ್ಯೇಕ ಕೋಡ್ ಮತ್ತು ಕಾಲಂ ಅಳವಡಿಸಬೇಕು, ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಕಲ್ಪಿಸಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ 12 ರಂದು ಪಾಡಿನಾಡ್ ನ ಕಕ್ಕಬೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಕಕ್ಕಬೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತ್ಯೇಕ ಕಾಲಮ್ ಮತ್ತು ಕೋಡ್ ನಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು.
ಮಾನವ ಸರಪಳಿ ಕಾರ್ಯಕ್ರಮವು ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುಕ್ಕಾಗಿ ನಡೆಯುತ್ತಿದ್ದು, ಕಕ್ಕಬ್ಬೆ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಅವರು ಮನವಿ ಮಾಡಿದ್ದಾರೆ.