ಮಡಿಕೇರಿ NEWS DESK ಮೇ 26 : ಕೊಡಗು ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ ಮುಂದುವರೆದಿದ್ದು, ನೂರಾರು ಮರಗಳು ಧರೆಗುರುಳಿವೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಅಪಾರ ಹಾನಿ ಉಂಟಾಗಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಾದ್ಯಂತ 5 ಇಂಚು ಮತ್ತು ಭಾಗಮಂಡಲದಲ್ಲಿ ದಾಖಲೆಯ 10 ಇಂಚು ಮಳೆಯಾಗಿದೆ. ಮುಂಜಾಗೃತಾ ಕ್ರಮವಾಗಿ ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ನೀರಿನಲ್ಲಿ ಇಳಿಯುವುದು, ಮುಳುಗುವುದು, ಸಾಹಸ ಚಟುವಟಿಕೆ ನಡೆಸುವುದು ಮತ್ತು ಈಜುವುದನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ::: ಭಾರೀ ವಾಹನಗಳಿಗೆ ನಿರ್ಬಂಧ ::: ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದೆ. ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗುತ್ತಿದೆ. ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ ಉಂಟಾಗಿ ಅನಾಹುತಗಳಾಗುವ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿಗಳ ರಕ್ಷಣೆ, ಪ್ರಯಾಣಿಕರ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು, ರ‍್ಟಿಕ್ಯೂಲೇಟೆಡ್ ವಾಹನಗಳ ಸಂಚಾರವನ್ನು ಜೂ.6 ರಿಂದ ಜು.5 ರವರೆಗೆ ನಿಷೇಧಿಸಲಾಗಿದೆ. ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‌ಪೋಸ್ಟ್ ನಿರ್ಮಿಸಬೇಕು. ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಸಬೇಕು. ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ::: ಹಾರಂಗಿ ಸಭೆ ::: ಕೊಡಗಿನಲ್ಲಿ ವರುಣನ ಅಬ್ಬರ ಮುಂದುವರಿದಿರುವ ಹಿನ್ನೆಲೆ ಹಾರಂಗಿ ಜಲಾಶಯದ ಸ್ಥಿತಿಗತಿ, ಮುಂಜಾಗ್ರತಾ ಕ್ರಮಗಳ ಕುರಿತು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಹಾರಂಗಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ಅತಿ ಮಳೆಯಿಂದ ಹಾರಂಗಿ ವ್ಯಾಪ್ತಿಯಲ್ಲಿ ಎದುರಾಗಬಹುದಾದ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸುವಂತೆ ಸೂಚಿಸಿದರು.
ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ, ಹಾರಂಗಿ ಜಲಾಶಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ::: ಧರೆಗುರುಳಿದ ಮರಗಳು ::: ಮಾದಾಪುರ ಐಗೂರು ಹೊಳೆ ತುಂಬಿ ಹರಿಯುತ್ತಿದ್ದು, ಎಲ್ಲೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮರ ಬಿದ್ದ ಪರಿಣಾಮ ಸುಂಟಿಕೊಪ್ಪ ವೃತ್ತದ ಬಳಿಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ನಿರ್ಮಿಸಲಾಗಿದ್ದ ತಂಗುದಾಣ ನೆಲಸಮಗೊಂಡಿದ್ದು, ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಊರುಗುಪ್ಪೆ ಪೈಸಾರಿಯ ನಿವಾಸಿ ಮಹಮ್ಮದ್ ಎಂಬುವವರ ಮನೆಯ ಮೇಲೆ ಭಾರೀ ಗಾತ್ರದ ಮರ ಬಿದ್ದು ಮನೆ ಮತ್ತು ಕಾರಿಗೆ ಹಾನಿಯಾಗಿದೆ. ಮನೆಯಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಘಟನೆಯಿಂದ ರೂ.10 ಲಕ್ಷದಷ್ಟು ನಷ್ಟ ಉಂಟಾಗಿದೆ ಎಂದು ಮಹಮ್ಮದ್ ಅವರು ಗ್ರಾ.ಪಂ ಗೆ ಅರ್ಜಿ ಸಲ್ಲಿಸಿದ್ದಾರೆ. ಪಾತುಉಮ್ಮ ಹಾಗೂ ಸಾನಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸ್ಥಳಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ, ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ, ನಾಡಕಛೇರಿಯ ಪ್ರಭಾರ ಉಪತಹಶೀಲ್ಧಾರ್ ಪ್ರಶಾಂತ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಪ್, ಅಭಿವೃದ್ಧಿ ಅಧಿಕಾರಿ ನಂದೀಶ್ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದರು. ಹೊರೂರು ಗ್ರಾಮದ ನಿವಾಸಿ ದೇವಿಪ್ರಸಾದ್ ಅವರ ದನದ ಕೊಟ್ಟಿಗೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಸೋಮವಾರಪೇಟೆಯ ಚೌಡ್ಲು ಗ್ರಾಮ ಪಂಚಾಯತ್ ಹಾಗೂ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿದೆ. ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಅತ್ತಿಮಂಗಲ ಜಂಕ್ಷನ್ ನಲ್ಲಿ ರಸ್ತೆಗೆ ಭಾರೀ ಗಾತ್ರದ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಭಾಗದಲ್ಲಿ ಮನೆಗಳಿಗೂ ಹಾನಿಯಾಗಿದ್ದು, ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ವಿರಾಜಪೇಟೆ ಹೋಬಳಿಯ ಆರ್ಜಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ತಡೆಗೋಡೆ ಕುಸಿದು ಬಿದ್ದಿದೆ. ಅಲ್ಲದೆ ಈ ಭಾಗದಲ್ಲಿ ಮನೆಗಳಿಗೂ ಹಾನಿಯಾಗಿದೆ. ಕಲ್ಲುಬಾಣೆಯ ನಿವಾಸಿ ಮಜೀದ್ ಎಂಬುವವರ ಮನೆ ಮೇಲೆ ಮರ ಬಿದ್ದು ನಷ್ಟ ಉಂಟಾಗಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಈ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಭಾರೀ ಗಾಳಿ ಮಳೆಗೆ ಮರವೊಂದು ಬಿದ್ದು ಕಾರು ಹಾಗೂ ಸ್ಕೂಟಿಗೆ ಹಾನಿಯಾಗಿರುವ ಘಟನೆ ಮಡಿಕೇರಿ ಹೊರವಲಯದ ತಾಳತ್ಮನೆಯಲ್ಲಿ ನಡೆದಿದೆ. ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿ ತೊರೆಗಳು ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮೈಕೊರೆಯುವ ಚಳಿ ಇದೆ. ವಿವಿಧ ಬಡಾವಣೆಗಳಲ್ಲಿ ಬರೆಗಳು ಬಿದ್ದಿವೆ, ಮನೆ ಮತ್ತು ರಸ್ತೆಗಳಿಗೆ ಹಾನಿಯಾಗಿದೆ. ನಗರಸಭಾ ಸದಸ್ಯರು ಹಾಗೂ ಸಿಬ್ಬಂದಿಗಳು ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ::: ಮಳೆ ವಿವರ ::: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 126.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 449.84 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.40 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 143.30 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 657.83 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 445.27 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 155.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 500.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 246.10 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 120.28 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 420.96 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 333.15 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 112.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 316.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 251 ಮಿ.ಮೀ. ಮಳೆಯಾಗಿತ್ತು. ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 102.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 353.04 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 351.50 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 169, ನಾಪೋಕ್ಲು 162.20, ಸಂಪಾಜೆ 17, ಭಾಗಮಂಡಲ 225, ವಿರಾಜಪೇಟೆ 157.60, ಅಮ್ಮತ್ತಿ 153, ಹುದಿಕೇರಿ 138, ಶ್ರೀಮಂಗಲ 153, ಪೊನ್ನಂಪೇಟೆ 111, ಬಾಳೆಲೆ 79.12, ಸೋಮವಾರಪೇಟೆ 116, ಶನಿವಾರಸಂತೆ 100, ಶಾಂತಳ್ಳಿ 154, ಕೊಡ್ಲಿಪೇಟೆ 80.60, ಕುಶಾಲನಗರ 76.60, ಸುಂಟಿಕೊಪ್ಪ 128.20 ಮಿ.ಮೀ.ಮಳೆಯಾಗಿದೆ.
::: ಹಾರಂಗಿ ಜಲಾಶಯದ ನೀರಿನ ಮಟ್ಟ ::: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2834.70 ಅಡಿಗಳು. ಕಳೆದ ವರ್ಷ ಇದೇ ದಿನ 2824.11 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 63.60 ಮಿ.ಮೀ., ಇಂದಿನ ನೀರಿನ ಒಳಹರಿವು 1693 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 100 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.











