

ಬೆಂಗಳೂರು NEWS DESK ಮೇ 30 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಕುರಿತು ಹಲವು ಸೂಚನೆಗಳನ್ನು ನೀಡಿದರು. ತಪಾಸಣಾ ವರದಿಗಳನ್ನು ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್ಗಳು , ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ. ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು? ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಆರೋಗ್ಯ, ಸಾರಿಗೆ ಸಂಚಾರದಂತಹ ಮೂಲಭೂತ ಸೌಕರ್ಯಗಳು ಲಭಿಸದಿದ್ದರೆ ಅದನ್ನು ಆಡಳಿತದ ವೈಫಲ್ಯವೆಂದೇ ಪರಿಗಣಿಸಬೇಕಾಗಿದೆ. ಹಾಡಿಗಳಲ್ಲಿ ಶಾಲೆ, ರಸ್ತೆ, ಆಸ್ಪತ್ರೆಯಂತಹ ಮೂಲಸೌಲಭ್ಯ ಒದಗಿಸಲು ಇಂದಿಗೂ ಸರಿಯಾಗಿ ಯಾಕೆ ಸಾಧ್ಯವಾಗಿಲ್ಲ; ಅವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸರಿಯಾಗಿ ಹಕ್ಕು ಒದಗಿಸಲು ಯಾಕೆ ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳು, ಸಿಇಒಗಳು ಇಂತಹ ಹಾಡಿಗಳಿಗೆ ನಿರಂತರ ಭೇಟಿ ನೀಡಬೇಕು. ಕೆಲವು ಜಿಲ್ಲಾಧಿಕಾರಿಗಳು, ಸಿಇಒಗಳು ಸರಿಯಾಗಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ದೂರುಗಳು ಬಂದಿವೆ. ಸಾರ್ವಜನಿಕ ಭೇಟಿಯ ಅವಧಿಯನ್ನು ಮೊದಲೇ ಪ್ರಕಟಿಸಬೇಕು. ಶೋಷಿತರು, ಬಡವರು, ಜನಸಾಮಾನ್ಯರು ಸಾಮಾನ್ಯವಾಗಿ ಜಿಲ್ಲಾಧಿಕಾರಿ ಅವರ ಕಚೇರಿಗೆ ಬರುತ್ತಾರ. ಅಂತವರ ಸಂಕಷ್ಟಗಳನ್ನು ನೀವೇ ಆಲಿಸದಿದ್ದರೆ ಅದನ್ನು ಬಗೆಹರಿಸುವವರು ಯಾರು? ಯಾರ ಬಳಿ ಅವರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು? ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಜನರಿಗೆ ಲಭ್ಯವಿರಬೇಕು. ಇದನ್ನು ಜಿಲ್ಲಾಧಿಕಾರಿಗಳು ಖಾತ್ರಿಪಡಿಸಬೇಕು. ಕೇಂದ್ರ ಸ್ಥಾನದಲ್ಲಿರದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನನಗೆ ವರದಿ ನೀಡಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು. ಅದರೊಂದಿಗೆ ಶಾಲೆ, ಹಾಸ್ಟೆಲ್, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.










