ಮಡಿಕೇರಿ ಜೂ.6 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ ಮತ್ತು ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ಜೂ.9 ರಂದು ಸಾಹಿತ್ಯ ಪ್ರಪಂಚದ ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಗರದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಹೋಟೆಲ್ ರೆಡ್‍ಬ್ರಿಕ್ಸ್‍ನ ‘ಸತ್ಕಾರ’ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಪದ್ಮಾ ಶೇಖರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆಂದರು. ಸಾಹಿತಿಗಳು ಮತ್ತು ಬೂಕರ್ ಪ್ರಶಸ್ತಿ ಪುರಸ್ಕøತರಾದ ದೀಪಾ ಭಾಸ್ತಿ ಅವರನ್ನು ಕವಿ ಮತ್ತು ಅನುವಾದಕಿ ಹಾಸನದ ಜ.ನಾ.ತೇಜಶ್ರೀ ಸನ್ಮಾನಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಶಕ್ತಿ ದಿನ ಪತ್ರಿಕೆ ಸಂಪಾದಕ ಜಿ.ಚಿದ್ವಿಲಾಸ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷರಾದ ಪುದಿಯನೆರವನ ರೇವತಿ ರಮೇಶ್, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಕನ್ನಡದ ಹಿರಿಯ ಸಾಹಿತಿ ಬಾನು ಮುಷ್ಲಾಕ್ ಅವರ ‘ಎದೆಯ ಹಣತೆ’ ಕಥಾ ಸಂಗ್ರಹವನ್ನು ‘ಹರ್ಟ್ ಲ್ಯಾಂಪ್’ ಶೀರ್ಷಿಕೆಯಡಿ ಇಂಗ್ಲೀಷ್‍ಗೆ ಅನುವಾದಿಸಿದ ದೀಪಾ ಭಾಸ್ತಿ ಅವರು ಬೂಕರ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇವರಿಗೆ ಸಾರ್ವಜನಿಕವಾದ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಮೊದಲ ಬಾರಿಗೆ ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು, ಸಾಹಿತಿಗಳು, ಕವಿಗಳು, ಬರಹಗಾರರು ಸಹಕರಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ನಿರ್ದೇಶಕ ಶ್ರೀಧರ್ ಹೂವಲ್ಲಿ, ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್, ಪ್ರಧಾನ ಕಾರ್ಯದರ್ಶಿ ಡಾ.ಕಾವೇರಿ ಪ್ರಕಾಶ್ ಉಪಸ್ಥಿತರಿದ್ದರು.











