ಮಡಿಕೇರಿ ಜೂ.18 NEWS DESK : ಇತ್ತೀಚೆಗೆ ಸಿದ್ದಾಪುರ ಸಮೀಪ ಕರಡಿಗೋಡು ಭಾಗದ ಕಾಫಿ ತೋಟಗಳ ಸುತ್ತಮುತ್ತ ಕಾಣಿಸಿಕೊಂಡಿದ್ದ ಹುಲಿಯ ಚಲನವಲನದ ಮೇಲೆ ಅರಣ್ಯ ಇಲಾಖೆ ನಿಗಾ ವಹಿಸಿದೆ. ಎರಡು ದಿನಗಳ ಹಿಂದೆ ರಾತ್ರಿ ವೇಳೆ ಹುಲಿ ಸಂಚಾರ ಕಂಡು ಬಂದು ಗ್ರಾಮದಲ್ಲಿ ಆತಂಕ ಮೂಡಿತ್ತು. ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಅಧಿಕಾರಿಗಳು ಇಂದು ಸ್ಥಳಕ್ಕೆ ಭೇಟಿ ನೀಡಿ ಹುಲಿ ಚಲನವಲನದ ಮೇಲೆ ನಿಗಾ ವಹಿಸಿರುವ ಅರಣ್ಯ ಸಿಬ್ಬಂದಿಗಳ ಕಾರ್ಯಾರಚಣೆಯನ್ನು ಪರಿಶೀಲಿಸಿದರು. ವಿರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಮ್ ಹಾಗೂ ಉಪ ವಲಯ ಅರಣ್ಯ ಅಧಿಕಾರಿ ಸಂಜಿತ್ ಸೋಮಯ್ಯ ಅವರ ಉಪಸ್ಥಿತಿಯಲ್ಲಿ 30 ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾರ್ಯಾಚರಣೆ ವೇಳೆ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಹುಲಿ ಅರಣ್ಯ ಭಾಗಕ್ಕೆ ತೆರಳಿರುವ ಸುಳಿವು ಸಿಕ್ಕಿದೆ. ಆದರೂ ಕಾರ್ಯಾಚರಣೆ ಮುಂದುವರೆದಿದ್ದು, ಹುಲಿ ಗ್ರಾಮದಲ್ಲಿ ಕಂಡು ಬಂದರೆ ಅರವಳಿಕೆ ನೀಡಿ ಸೆರೆ ಹಿಡಿಯಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮಸ್ಥರು ಆತಂಕ ಪಡುವ ಅಗತ್ಯವಿಲ್ಲವೆಂದು ಸಂಕೇತ್ ಪೂವಯ್ಯ ತಿಳಿಸಿದರು.












