ಸುಂಟಿಕೊಪ್ಪ ಜೂ.25 NEWS DESK : ಹಿಂದಿನ ಕಾಲದಲ್ಲಿ ನಾವುಗಳು ವನ್ಯಪ್ರಾಣಿಗಳನ್ನು ಪ್ರಾಣಿ ಸಂಗ್ರಹಾಲಯ, ಸರ್ಕಸ್, ಸಿನಿಮಾ ಅಥವಾ ಅರಣ್ಯಕ್ಕೆ ತೆರಳಿ ನೋಡಬೇಕಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ವನ್ಯಪ್ರಾಣಿಗಳು ನಾಡಿನಲ್ಲೇ ಕಾಣುವಂತಾಗಿದೆ ಎಂದು ಯೋಜನಾಧಿಕಾರಿ ಪುರೋಷತ್ತಮ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಪರಿಸರ ದಿನಚಾರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಅವರು ಮಾತನಾಡಿದರು. ಪರಿಸರವನ್ನು ಉಳಿಸಿ ಬೆಳೆಸಬೇಕಾದ ನಾವುಗಳು ಆಧುನಿಕತೆಯ ಭರಾಟೆಯಲ್ಲಿ ನಿತ್ಯ ಪರಿಸರವನ್ನು ನಾಶಗೊಳಿಸಲಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹವಾಮಾನ ವೈಪರೀತ್ಯ ಸೇರಿದಂತೆ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿನತ್ತ ಮುಖ ಮಾಡುತ್ತಿರುವುದು ಸರ್ವೆ ಸಾಮಾನ್ಯವಾಗಿದೆ. ಆದುದ್ದರಿಂದ ನಮ್ಮ ಸುತ್ತ ಮುತ್ತಲಿನಲ್ಲಿರುವ ಪಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಪ್ರತಿಯೊಬ್ಬರು ಮುಂದಾಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನ್ನಾಥ್, ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲೂ ಗಿಡಗಳನ್ನು ನೆಟ್ಟು ಬೆಳೆಸಬೇಕು. ಆ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕೆಂದು ಕಿವಿಮಾತು ಹೇಳಿದರು. ಕಾನ್‍ಬೈಲ್ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯನಿ ಶಾಂತಿ ಮಾತನಾಡಿ, ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಬೇಕು ಎಂದರು. ಮಂಜಿಕೆರೆ ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಮೂರ್ತಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿನಿಗಳು ತಮ್ಮ ತಾಯಿಯಂದಿರ ಹೆಸರಿನಲ್ಲಿ ಸಸಿಗಳನ್ನು ನೆಟ್ಟು ಪೊಷಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸತೀಶ್, ಸುಂಟಿಕೊಪ್ಪ ವಲಯ ಮೇಲ್ವಿಚಾರಕರಾದ ಸಂತೋಷ್, ಕಾನ್‍ಬೈಲ್ ಒಕ್ಕೂಟದ ಅಧ್ಯಕ್ಷೆ ಭವ್ಯ, ಪದಾಧಿಕಾರಿಗಳಾದ ಗೀತಾ, ಪುಷ್ಪಲತ, ಆರ್ಚನ, ಸೇವಾ ಪ್ರತಿನಿಧಿ ಯಶೋಧ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಸಹಶಿಕ್ಷಕರು ಉಪಸ್ಥಿತರಿದ್ದರು. ಸಮಾರಂಭದ ಮೊದಲಿಗೆ ಅತಿಥಿ ಗಣ್ಯರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಕಾರ್ಯಕ್ಷೇತ್ರದ ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರುಗಳು ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿದರು.












