ಮಡಿಕೇರಿ NEWS DESK ಜೂ.25 : ಕೊಡಗು ಜಿಲ್ಲೆಯಲ್ಲಿ ಮತ್ತೆ ಗಾಳಿಮಳೆ ಬಿರುಸುಗೊಂಡಿದೆ. ಮಳೆಯೊಂದಿಗೆ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಜನರಲ್ಲಿ ಆತಂಕ ಮೂಡಿದೆ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜೂ.26 ರಂದು ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ಗಾಳಿ ವೇಗವಾಗಿ ಬೀಸುತ್ತಿದ್ದು, ಮಳೆಯ ಪ್ರಮಾಣ ಹೆಚ್ಚಿದೆ. ಕಳೆದ 24 ಗಂಟೆಗಳಲ್ಲಿ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ 7 ಇಂಚು, ದಕ್ಷಿಣ ಕೊಡಗಿನ ಶ್ರೀಮಂಗಲದಲ್ಲಿ 6 ಇಂಚು, ಮಡಿಕೇರಿ ತಾಲ್ಲೂಕಿನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ 5 ಇಂಚಿಗೂ ಅಧಿಕ ಮಳೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹಾರಂಗಿ ಜಲಾಶಯದಿಂದ ಹೆಚ್ಚುವರಿ 5 ಕ್ಯೂಸೆಕ್ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಭಾರೀ ಗಾಳಿಯಿಂದ ಗ್ರಾಮೀಣ ಭಾಗದಲ್ಲಿ ಮರ ಮತ್ತು ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿದೆ. ನದಿತೀರ, ಎತ್ತರ ಮತ್ತು ತಗ್ಗು ಪ್ರದೇಶಗಳಲ್ಲಿ ಆತಂಕದ ವಾತಾವರಣವಿದ್ದು, ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಮಡಿಕೇರಿಯಲ್ಲಿ ಭಾರೀ ಗಾಳಿಯೊಂದಿಗೆ ಮೈಕೊರೆಯುವ ಚಳಿ ಇದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. *ಶವ ಸಂಸ್ಕಾರಕ್ಕೆ ಪರದಾಟ* ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಗಾಳಿಮಳೆಯಾಗುತ್ತಿರುವುದರಿಂದ ಶವ ಸಂಸ್ಕಾರಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿ ಹರಿಯುವ ಬಲಮುರಿ ಗ್ರಾಮದ ಸ್ಮಶಾನದಲ್ಲಿ ಇಂದು ವ್ಯಕ್ತಿಯೊಬ್ಬರ ಮೃತದೇಹದ ಅಂತ್ಯ ಸಂಸ್ಕಾರದ ಸಂದರ್ಭ ಗುಂಡಿ ತೆಗೆದಷ್ಟು ನೀರು ಉಕ್ಕಿ ಬಂದು ಕುಟುಂಸ್ಥರು ಕಷ್ಟ ಅನುಭವಸುವಂತ್ತಾಯಿತು. ಗ್ರಾಮದ ಕುಮಾರ (42) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದು, ಇಂದು ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಎಡೆಬಿಡದೆ ಸುರಿಯುತ್ತಿದ್ದ ಮಳೆಯ ನಡುವೆ ಗುಂಡಿ ತೋಡಿದಷ್ಟು ನೀರು ಉಕ್ಕಿ ಬರುತ್ತಿತ್ತು. ಬಕೇಟ್ ಗಳ ಮೂಲಕ ನೀರನ್ನು ಖಾಲಿ ಮಾಡುತ್ತಾ ಶವ ಸಂಸ್ಕಾರ ಮಾಡಲಾಯಿತು. ಆದರೂ ನೀರು ಉಕ್ಕಿ ಬರುತ್ತಿದ್ದುದರಿಂದ ನೆರೆದಿದ್ದವರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಸ್ಮಶಾನದಲ್ಲಿ ಶವ ಸಂಸ್ಕಾರಕ್ಕೆ ಅನುಕೂಲವಾಗುವಂತೆ ಶೆಡ್ ನಿರ್ಮಿಸಿಕೊಡಬೇಕು ಮತ್ತು ಸೂಕ್ತ ರಸ್ತೆ ವ್ಯವಸ್ಥೆ ಕಲ್ಪಿಸಬೇಕೆಂದು ಸ್ಥಳಕ್ಕೆ ಭೇಟಿ ನೀಡಿದ್ದ ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಅವರ ಬಳಿ ಗ್ರಾಮಸ್ಥರು ಮನವಿ ಮಾಡಿದರು. *ಮಳೆ ವಿವರ*
ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 60.92 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.50 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1234.91 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 582.32 ಮಿ.ಮೀ ಮಳೆಯಾಗಿತ್ತು.ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 57.18 ಮಿ.ಮೀ. ಕಳೆದ ವರ್ಷ ಇದೇ ದಿನ 22.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1800.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 833.65 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 49.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 44.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1230.30 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 537.75 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 73.52 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1171.28 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 566.49 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 107.05 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.55 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1251.04 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 472.01 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 721.74 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 501.70 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 22, ನಾಪೋಕ್ಲು 71.60, ಸಂಪಾಜೆ 47.50, ಭಾಗಮಂಡಲ 87.60, ವಿರಾಜಪೇಟೆ 56.40, ಅಮ್ಮತ್ತಿ 43.50, ಹುದಿಕೇರಿ 89, ಶ್ರೀಮಂಗಲ 146, ಪೊನ್ನಂಪೇಟೆ 40, ಬಾಳೆಲೆ 19.08, ಸೋಮವಾರಪೇಟೆ 83.20, ಶನಿವಾರಸಂತೆ 112, ಶಾಂತಳ್ಳಿ 160, ಕೊಡ್ಲಿಪೇಟೆ 73, ಕುಶಾಲನಗರ 8.80, ಸುಂಟಿಕೊಪ್ಪ 25 ಮಿ.ಮೀ.ಮಳೆಯಾಗಿದೆ. *ಹಾರಂಗಿ ಜಲಾಶಯದ ನೀರಿನ ಮಟ್ಟ* ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2851.34 ಅಡಿಗಳು. ಕಳೆದ ವರ್ಷ ಇದೇ ದಿನ 2829.63 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 6.20 ಮಿ.ಮೀ., ಕಳೆದ ವರ್ಷ ಇದೇ ದಿನ 2.60 ಮಿ.ಮೀ., ಇಂದಿನ ನೀರಿನ ಒಳಹರಿವು 4561 ಕ್ಯುಸೆಕ್, ಕಳೆದ ವರ್ಷ ಇದೇ ದಿನ 514 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 5000 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.











