ಮಡಿಕೇರಿ ಜು.4 NEWS DESK : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‍ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜು.7 ರಂದು ನಾಪೋಕ್ ನಲ್ಲಿ ಏಳನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ನಾಪೋಕ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಸಂವಿಧಾನಿ ಹಕ್ಕೊತ್ತಾಯಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ.
2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‍ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆ್ಯನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದ್ದಾರೆ.
ಮಾನವ ಸರಪಳಿ ಕಾರ್ಯಕ್ರಮವು ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಶಾಂತಿಯುತವಾಗಿ ನಡೆಯಲಿದ್ದು, ನಾಪೋಕ್ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.











