
ಮಡಿಕೇರಿ ಆ.12 NEWS DESK : ಪರಿಸರ ಸ್ನೇಹಿಯಾಗಿ ಗೌರಿ-ಗಣೇಶ ಹಬ್ಬ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ನೀಡಿದ್ದಾರೆ. ಪ್ರಸಕ್ತ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗು ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗು ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದೆ. ಇದರಿಂದ ಜಲಮೂಲಗಳು ಕಲುಷಿತಗೊಂಡು ಪರಿಸರಕ್ಕೆ ಹಾಗು ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾಗುವುದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ದಿನಾಂಕ 20-07-2016 ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ತಿಳಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ/ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ. ತದನಂತರ ಗೌರಿ ಗಣೇಶ ಮೂರ್ತಿಗಳನ್ನು ಅವರವರ ಮನೆಗಳಲ್ಲಿಯೇ ಅಥವಾ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿ ವತಿಯಿಂದ ನಿಗಧಿಪಡಿಸಲಾಗುವ ಸ್ಥಳಗಳಲ್ಲಿ ಮಾತ್ರವೇ ವಿಸರ್ಜಿಸುವುದು. ಗೌರಿ-ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣೂ, ಬಾಳೆ ಕಂಬ, ಮಾವಿನ ತೋರಣ ಮತ್ತಿತರ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯ್ತಿಯಿಂದ ವ್ಯವಸ್ಥೆ ಮಾಡಿರುವ ಕಸ ಸಂಗ್ರಹಣ ವಾಹನಕ್ಕೆ ನೀಡುವುದು. ಶಬ್ದ ಮಾಲಿನ್ಯ (ನಿರ್ಬಂಧ ಮತ್ತು ನಿಯಂತ್ರಣ)ನಿಯಮಗಳು 2000 ರ ನಿಬಂಧನೆಗಳನ್ನು ಗಣೇಶ ಪೆಂಡಾಲ್‍ಗಳಲ್ಲಿ ಅನುಸರಿಸಬೇಕು. ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್‍ಗಳನ್ನು ನಿರ್ಮಿಸುವಲ್ಲಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದು ಹಾಗು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದೆಂದು ತಿಳಿಸಲಾಗಿದೆ. ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥಗಳ ಮೂಲಕ ವಿಧಿಸಲಾಗುವುದು. ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗುಗಳು ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.








