
ನಾಪೋಕ್ಲು ಆ.12 NEWS DESK : ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ದೈನಂದಿನ ಚಟುವಟಿಕೆಗೆ ಚಾಲನೆ ದೊರೆಯಿತು. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಶನ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಮುಖಾಂತರ ಸಮಾಜ ಸೇವೆಯನ್ನು ಮಾಡಿ ದೇಶದ ಅಭಿವೃದ್ಧಿಗೆ ಸಹಾಯಕವಾಗಬೇಕು. ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುತ್ತದೆ ಎಂದು ಹೇಳಿದರು. ಪಾರಾಣೆ ಗ್ರಾಮದ ಪ್ರಗತಿಪರ ರೈತ ಬಲ್ಯಾಟಂಡ ಕೌಶಿಕ್ ಕುಟ್ಟಯ್ಯ ಮಾತನಾಡಿ, ತಾವು ಮಾಡುತ್ತಿರುವ ಪ್ರಗತಿಪರ ಕೃಷಿ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ರಾಷ್ಟ್ರೀಯ ಸೇವಾ ಯೋಜನೆ ಮುಖಾಂತರ ವಿದ್ಯಾರ್ಥಿಗಳು ತಮ್ಮ ನೆಲ ಜಲದ ಸಂರಕ್ಷಣೆಗೆ ಬದ್ಧರಾಗಿರಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ದಮಯಂತಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಕುಮಾರಿ ಅನನ್ಯ ದೇವೇಂದ್ರ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿ ಕುಮಾರಿ ಪಂಚಮಿ ವಂದಿಸಿದರು.
ವರದಿ : ದುಗ್ಗಳ ಸದಾನಂದ.








