
ಸೋಮವಾರಪೇಟೆ ಆ.15 NEWS DESK : ಸುರಿಯುವ ಮಳೆಯ ನಡುವೆಯೂ ತಾಲ್ಲೂಕು ಆಡಳಿತದಿಂದ 79ನೆ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಾಲ್ಲೂಕು ದಂಡಾಧಿಕಾರಿ ಕೃಷ್ಣಮೂರ್ತಿ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮಹಾನಾಯಕರ ತ್ಯಾಗ ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯೊಳಗೆ ಏಕತೆಗೆ ಭಂಗ ಬರಬಾರದು, ಸಾಮರಸ್ಯ ಒಡೆಯಬಾರದು, ಭಾತೃತ್ವ ಹಾಗೂ ಸಹೋದರತೆಯಿಂದ ಇರಬೇಕೆಂದರು. ಮೂಲಭೂತ ರಾಜಕೀಯ ಸಂಹಿತೆಗಳು, ಪ್ರಜೆಗಳ ಹಕ್ಕುಗಳು, ಅಧಿಕಾರ ಹಾಗೂ ಕರ್ತವ್ಯಗಳನ್ನು ನಿಗದಿಪಡಿಸಲು ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲಕ ನಡೆಯುತ್ತಿರುವುದು ಗಮನಾರ್ಹವೆಂದರು. ತಾಲ್ಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜು ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆದಂ, ಚೌಡ್ಲು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೀತಾ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷೆ ಮೋಹಿನಿ, ಚೌಡ್ಲು ಗ್ರಾಮ ಪಂಚಾಯತಿ ಸದಸ್ಯ ನತೀಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ವೃತ್ತ ನಿರೀಕ್ಷಕ ಮುದ್ದುಮಾದೇವ,ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬೆಳ್ಳಿಯಪ್ಪ,ಅಬಕಾರಿ ನಿರೀಕ್ಷಕ ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ತಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆಸಲ್ಲಿಸಿದ ಪ್ರಮುಖರನ್ನು ಸನ್ಮಾನಿಸಲಾಯಿತು. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆಗಳ ಗಾಯನ ನಡೆಯಿತು.









