
ವಿರಾಜಪೇಟೆ ಆ.16 NEWS DESK : ವಿರಾಜಪೇಟೆ ನಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ 8 ಹೊಸ ಮಾರ್ಗಗಳನ್ನು ಹಾಗೂ 8 ನೂತನ ಬಸ್ ಸಂಚಾರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಕರ ದಟ್ಟಣೆಯನ್ನು ತಗ್ಗಿಸಲು ಹಾಗೂ ಏರಿಕೆಯಾಗಿರುವ ಪ್ರಯಾಣಿಕರ ಸಂಖ್ಯೆಗನುಗುಣವಾಗಿ ನೂತನ ಬಸ್ ಮಾರ್ಗಕ್ಕೆ ಹೆಚ್ಚುವರಿಯಾಗಿ ಎಂಟು ನೂತನ ಬಸ್‍ಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಬಸ್ ನ ಚಾಲಕರು ಹಾಗೂ ನಿರ್ವಾಹಕರು ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸಂಸ್ಥೆಗೆ ಒಳ್ಳೆಯ ಹೆಸರು ತರುವಲ್ಲಿ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು. ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗಾಗಿ ಉಚಿತ ಬಸ್ ಸೌಲಭ್ಯವನ್ನು ಕಲ್ಪಿಸಿದ್ದು ಇದರಿಂದ ನಾಡಿನ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದು ಹೇಳಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರು ಜಾನ್ಸನ್, ವಿರಾಜಪೇಟೆ ಪುರಸಭೆಯ ಮುಖ್ಯಅಧಿಕಾರಿಗಳಾದ ನಾಚಪ್ಪ, ವಿರಾಜಪೇಟೆ ಪುರಸಭೆಯ ಉಪಾಧ್ಯಕ್ಷರಾದ ಫಸಿಯಾ ತಬ್ಸುಂ, ಸದಸ್ಯರು, ತಾಲೂಕು ದಂಡಾಧಿಕಾರಿಗಳು ಹಾಗೂ ಅಧಿಕಾರಿಗಳು, ಸರಕಾರಿ ನಾಮನಿರ್ದೇಶಕ ಅಧ್ಯಕ್ಷರು, ಸದಸ್ಯರುಗಳು, ಆಹ್ವಾನಿತ ಗಣ್ಯರು, ಕೆಎಸ್ ಆರ್ ಟಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








